ಪ್ರಚಾರದ ಅಖಾಡಕ್ಕಿಳಿದ ಸಿಎಂ

ಬೆಂಗಳೂರು, ಏ. ೧- ಲೋಕಸಭಾ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಮೂರು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಿ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು.
ಮೈಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಗೆಲುವಿನ ಮೇಲೆ ಗಮನ ಕೇಂದ್ರೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ವರುಣ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ, ಮಧ್ಯಾಹ್ನದ ನಂತರ ಟಿ. ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವರು.
ನಾಳೆ ಮುಖ್ಯಮಂತ್ರಿ ಸಿದ್ದರಾಮ್ಯಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ ನಂತರ ಬೆಳಿಗ್ಗೆ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಮತ್ತು ಸಂಜೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳುವರು.
ಏ. ೩ ರಂದು ಬೆಳಿಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿರುವ ಸಿದ್ದರಾಮಯ್ಯ ಅವರು ಅಲ್ಲಿಂದ ಚಾಮರಾಜನಗರಕ್ಕೆ ತೆರಳಿ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಭೋಸ್ ಅವರ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗುವರು.
ಅದೇ ದಿನ ಮುಖ್ಯಮಂತ್ರಿಗಳು ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಕೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ತಮ್ಮ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಲಿದ್ದಾರೆ.