ಪ್ರಜ್ವಲ್ ಬಂಧನಕ್ಕೆ ಕ್ರಮಕೈಗೊಳ್ಳಿ ಸಿಎಂ ಸೂಚನೆ

ಬೆಂಗಳೂರು, ಮೇ ೪- ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಂಡು ಪ್ರಕರಣದಲ್ಲಿ ಭಾಗಿಯಾಗಿರುವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಸ್‌ಐಟಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿಶೇಷ ತನಿಖಾ ತಂಡದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗ ಬಗ್ಗೆ ಮಾಹಿತಿ ಪಡೆದುಕೊಂಡು ವಿಳಂಬ ಹಾಗೂ ನಿರ್ಲಕ್ಷ್ಯ ತೋರದೆ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಜವೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆಯನ್ನು ಸಹಿಸಲ್ಲ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸಭೆಯಲ್ಲಿ ಚಾಟಿ ಬೀಸಿದರು.
ಮುಖ್ಯಮಂತ್ರಿಗಳ ಈ ಸಭೆಯಲ್ಲಿ ಭಾಗಿಯಾಗಿದ್ದ ಎಸ್‌ಐಟಿ ಅಧಿಕಾರಿಗಳು, ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕೌಟ್ ನೋಟಿಸ್ ಜಾರಿ ಮಾಡಿ ಶೋಧ ನಡೆಸುತ್ತಿದ್ದೇವೆ. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು, ತನಿಖೆಗೆ ವೇಗ ಸಿಗಲಿದೆ ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಕರೆತರುವುದಾಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಗೆ ಹೇಳಿದರು.