
ಬೀದರ್:ಫೆ.28: ಯುವಕರ ಕ್ರೀಡಾ ಪ್ರತಿಭೆ ಪ್ರದರ್ಶನಕ್ಕೆ ಕ್ರೀಡಾಕೂಟಗಳು ವೇದಿಕೆಯಾಗಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಹೇಳಿದರು.
ನೆಹರೂ ಯುವ ಕೇಂದ್ರ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ಹಾಗೂ ಭಗತ್‍ಸಿಂಗ್ ಯುವಕ ಸಂಘದ ವತಿಯಿಂದ ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದರು.
ಜಿಲ್ಲೆಯನ್ನು ಅಪರಾಧ ಮುಕ್ತಗೊಳಿಸಲು ಎಲ್ಲರೂ ಸಹಕರಿಸಬೇಕು. ಅಕ್ರಮ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಠಾಣೆ ಇಲ್ಲವೇ ಪೊಲೀಸ್ ಸಹಾಯವಾಣಿಗೆ ಮಾಹಿತಿ ಕೊಡಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಲು ನೆರವಾಗಲಿವೆ ಎಂದು ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಬಹಳ ಅವಕಾಶ ಇದೆ. ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆಗೈದವರಿಗೆ ಉದ್ಯೋಗದಲ್ಲಿ ಮೀಸಲು ದೊರಕಲಿದೆ ಎಂದು ಹೇಳಿದರು.
ಜಿಲ್ಲೆಯ ಕ್ರೀಡಾ ಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಪ್ರದರ್ಶಿಸಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಸಿ. ವೀರಣ್ಣ ಮಾತನಾಡಿ, ವಿದ್ಯಾರ್ಥಿಗಳು ಯೋಗ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.ಕ್ರೀಡಾಕೂಟಗಳಿಗೆ ವಿಶ್ವವಿದ್ಯಾಲಯದ ಸಹಕಾರ ಸದಾ ಇರಲಿದೆ ಎಂದು ಹೇಳಿದರು.
ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಿಲೀಪಕುಮಾರ ಡಿ, ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ. ಎಂ.ಡಿ. ಸೊರಣಗಿ, ಸೋಮನಾಥ ಪೂಜಾರಿ, ಷರೀಫ್ ಇದ್ದರು.
ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಮುಬಾರಕ್ ಮಂದಕನಳ್ಳಿ
ಸ್ವಾಗತಿಸಿದರು.ಜಿಲ್ಲೆಯ ಎಲ್ಲ ತಾಲ್ಲೂಕುಗಳ ಒಟ್ಟು 42 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.