ಪ್ರತಿಯೊಬ್ಬರೂ ಪ್ರಜಾ ಪ್ರಭುತ್ವ ಹಬ್ಬವನ್ನು ಯಶಸ್ವಿಗೊಳಿಸಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.17:- ಏಪ್ರಿಲ್ 26 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಪ್ರಜಾಪ್ರಭುತ್ವ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್. ಉಮೇಶ್ ಅವರು ತಿಳಿಸಿದರು.
ಯಳಂದೂರು ಪಟ್ಟಣ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಯಳಂದೂರು ಪಟ್ಟಣದಲ್ಲಿಂದು ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕನ್ನು ನಮ್ಮ ಸಂವಿಧಾನದಲ್ಲಿ ನೀಡಿದ್ದು, ಪ್ರತಿಯೊಬ್ಬರು ಸಹ ತಮ್ಮ ಹಕ್ಕನ್ನು ಚಲಾಯಿಸಬೇಕು. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಹಕÀರಿಸಬೇಕು ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾದಲ್ಲಿ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯವನ್ನು ಮೊಳಗಿಸಿ ಎನ್.ಆರ್.ಎಲ್.ಎಂ ಒಕ್ಕೂಟದ ಸದಸ್ಯರು ಪಟ್ಟಣದುದ್ದಕ್ಕೂ ಮೆರವಣಿಗೆ ನಡೆಸಿ ಸಾರ್ವಜನಿಕರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಅಲ್ಲಿಯೂ ಸಹ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯವನ್ನು ಮೊಳಗಿಸಿ ಗಮನ ಸೆಳೆದರು. ಇದೇ ವೇಳೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್, ತಾಲ್ಲೂಕು ಪಂಚಾಯಿತಿ ಕಚೇರಿ ವ್ಯವಸ್ಥಾಪಕರಾದ ವೆಂಕಟಾಚಲ, ತಾಲ್ಲೂಕು ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.