ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಜ್ಞಾನ ಸಂಪಾದನೆಯ ಮೂಲಕ ದೇಶದ ಘನತೆಯನ್ನು ಎತ್ತಿ ಹಿಡಿಯಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಕರೆ

ವಿಜಯಪುರ, ಮಾ.23-ಜ್ಞಾನ ಸಂಪಾದನೆಯ ಮೂಲಕ ದೇಶದ ಘನತೆಯನ್ನು ಎತ್ತಿ ಹಿಡಿಯಬೇಕು. ದೇಶದ ಸಮಗ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಕರೆ ನೀಡಿದರು.
ಅವರು ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಭಾರತ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶನಾಲಯ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಆಶಯದಂತೆ ನಮ್ಮ ದೇಶದಲ್ಲಿ ಸಾಮಾಜಿಕ ಸಮಾನತೆ ತರಲು ಪ್ರತಿಯೊಬ್ಬರು ತಮ್ಮ ತಮ್ಮ ನೆಲೆಯಲ್ಲಿ ಕೆಲಸ ಮಾಡಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ’ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಸದಾಶಿವ ಮರ್ಜಿ ಮಾತನಾಡಿ, ‘ನಮ್ಮ ಭಾವನೆಗಳನ್ನು, ತತ್ವವನ್ನು, ಆದರ್ಶಗಳನ್ನು, ವಿಚಾರವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಭಾಷೆಯು ಪ್ರಮುಖ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತದೆ. ಹೀಗಾಗಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸುವಲ್ಲಿ ಭಾಷೆಯು ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ’ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳೊಂದಿಗೆ ರಾಷ್ಟ್ರೀಯ ಭಾವೈಕ್ಯತೆ, ಏಕತೆ, ಸಮಾನತೆ, ಸ್ವಾತಂತ್ರ್ಯದ ಕುರಿತು ಅರಿವು ಮೂಡಿಸುತ್ತದೆ’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ‘ಪ್ರಸ್ತುತ ದಿನಮಾನದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಂವಿಧಾನದ ಆಶಯಗಳನ್ನು ಅರಿತುಕೊಳ್ಳಬೇಕಾಗಿದೆ. ಅಂದಾಗ ಮಾತ್ರ ಯುವ ಪೀಳಿಗೆ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಿ ಸಾಧಕರಾಗಿ ಹೊರಹೊಮ್ಮುತ್ತಾರೆ’ ಎಂದರು.
ಈ ರೀತಿಯ ಎನ್.ಎಸ್.ಎಸ್. ಶಿಬಿರಗಳನ್ನು ನಡೆಸುವುರಿಂದ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಹಾಗೂ ಸಾಮಾಜಿಕ ಮತ್ತು ಮಾನವ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಅದರೊಂದಿಗೆ ವಿದ್ಯಾರ್ಥಿಗಳ ವೈಯುಕ್ತಿಕ ಸಾಮಥ್ರ್ಯ, ಸಾಂಸ್ಥಿಕ ಸಾಮಥ್ರ್ಯ ಮತ್ತು ಸಮುದಾಯ ಸಾಮಥ್ರ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಉಪಯುಕ್ತವಾಗಿದೆ’ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ.ಸದಾಶಿವ ಮರ್ಜಿ ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಕಲಾವತಿ ಕಾಂಬ್ಳೆ, ಎನ್‍ಎಸ್‍ಎಸ್ ನೋಡಲ್ ಅಧಿಕಾರಿ ಡಾ ಮಲ್ಲಿಕಾರ್ಜುನ ಪೆಂಟದ್ ಹಾಗೂ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು, ಬೋಧಕ-ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿಗಳು, ವಿವಿಧ ರಾಜ್ಯಗಳ ಎನ್‍ಎಸ್‍ಎಸ್. ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆಯನ್ನು ಹಾಡಿದರು. ಶಿಬಿರಾರ್ಥಿಗಳು ಎನ್‍ಎಸ್‍ಎಸ್. ಗೀತೆಯನ್ನು ಹಾಡಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜಕ ಪ್ರೊ.ನಾಮದೇವಗೌಡ ಅತಿಥಿಗಳನ್ನು ಸ್ವಾಗತಿಸಿದರು. ರಾಯಚೂರು ಕೃಷಿ ಕಾಲೀಜಿನ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಹಾಗೂ ಸುರಪೂರಿನ ಶ್ರೀ ಜನನಿ ಮಹಿಳಾ ಕಲಾ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಮಲ್ಲಿಕಾರ್ಜುನ ಹೊಳೆಪ್ಪ ಅತಿಥಿಗಳನ್ನು ಪರಿಚಯಿಸಿದರು. ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಜೆನಿಫರ್ ಸೌಲಮ್ ವಂದಿಸಿದರು. ಅಕ್ಷಯ ಯಾರ್ದಿ ಕಾರ್ಯಕ್ರಮವನ್ನು ನಿರೂಪಿಸಿದರು.