(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೬-ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವುದು ಸರ್ಕಾರದ ನೀತಿಯಾಗಿದೆ. ಪ್ರಸ್ತುತ ೨೪ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಉಳಿದೆಡೆ ಸಹ ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿಂದು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ದಿನಕರ್ ಶೆಟ್ಟಿ ಮತ್ತು ಯಶಪಾಲ್ ಎ. ಸುವರ್ಣ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸರ್ಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಅಂದಾಜು ೬೧೦ ಕೋಟಿ ರೂ. ವೆಚ್ಚವಾಗುತ್ತದೆ. ಜತೆಗೆ ವಾರ್ಷಿಕವಾಗಿ ೬೦ ಕೋಟಿ ರೂ.ಗಳ ವೆಚ್ಚದ ಅಗತ್ಯ ಇರುತ್ತದೆ. ಹಾಗಾಗಿ ಅನುದಾನ ಲಭ್ಯತೆಯನ್ನು ಆಧರಿಸಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಜಿಲ್ಲೆಗಳಲ್ಲಿ ಆರಂಭಿಸಲು ಕ್ರಮ ವಹಿಸಲಾಗುವುದು. ಪ್ರಸ್ತುತ ವರ್ಷದಲ್ಲಿ ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದರು.ಪ್ರತಿ ಜಿಲ್ಲೆಗಳಲ್ಲೂ ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸರ್ಕಾರದ ನೀತಿಗೆ ಅನುಗುಣವಾಗಿ ೨೪ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ ಎಂದರು.ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಹಣಕಾಸು ಲಭ್ಯತೆಯನ್ನು ನೋಡಿಕೊಂಡು ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ. ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಜಾಗ ಇನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರವಾಗಿಲ್ಲ ಎಂದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರತಿ ಕಂದಾಯ ವಿಭಾಗದ ಮುಖ್ಯ ಜಿಲ್ಲಾ ಕೇಂದ್ರಗಳಲ್ಲಿ ಮಾಡಬೇಕು ಎಂಬುದು ಸರ್ಕಾರದ ನೀತಿ. ಅದರಂತೆ ಮೈಸೂರಿನಲ್ಲಿ ಈಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.