ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ


ಬಳ್ಳಾರಿ,ಜು.19: ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ 15 ಹೊಸ ಅಂಶಗಳ ಸರ್ಕಾರದ ಯೋಜನೆಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ ಅಲ್ಪಸಂಖ್ಯಾತ ಸಮುದಾಯದ ಎಲ್ಲಾ ವರ್ಗಗಳಿಗೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಇದು ಪ್ರತಿಯೊಬ್ಬ ಅಧಿಕಾರಿಗಳ ಜವಾಬ್ದಾರಿ ಎಂಬುದನ್ನು ಅರಿತುಕೊಂಡು ಕಾರ್ಯನಿರ್ವಹಿಸಿ ಎಂದರು.
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳನ್ನು ನಿಗದಿಪಡಿಸಿದ ಅವಧಿಯೊಳಗೆ ಅನುಷ್ಠಾನಗೊಳಿಸುವುದರ ಮೂಲಕ ಗುರಿ ಸಾಧಿಸಬೇಕು ಮತ್ತು ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಸಂಬಂಧಿಸಿದಂತೆ ಇನ್ನೂ ಪಾವತಿಯಾಗದ ಹಾಗೂ ಪರಿಶೀಲನಾ ಹಂತದಲ್ಲಿರುವ ವಿದ್ಯಾರ್ಥಿಗಳ ಶಿಷ್ಯವೇತನವು ಶೀಘ್ರದಲ್ಲಿಯೇ ಖಾತೆಗೆ ಜಮಾ ಆಗಬೇಕು. ಆಧಾರ್ ಸೀಡಿಂಗ್ ಸಮಸ್ಯೆ ಹಾಗೂ ಸ್ಕಾಲರ್ ಶಿಪ್ ತಂತ್ರಾಂಶದಲ್ಲಿನ ಸಮಸ್ಯೆಗಳಿದ್ದಲ್ಲಿ ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ತಿಂಗಳು ನಡೆಯುವ ಉದ್ಯೋಗ ಮೇಳದಲ್ಲಿ ಅಲ್ಪಸಂಖ್ಯಾತ ವರ್ಗಗಳ ಅಭ್ಯರ್ಥಿಗಳು ಏಪ್ರೀಲ್ 01ರಿಂದ ಜೂನ್ 30ರವರೆಗೆ ಒಟ್ಟು 4145 ಅಭ್ಯರ್ಥಿಗಳು ಹೆಸರನ್ನು ನೊಂದಾಯಿಸಿಕೊಂಡಿದ್ದು, ಸರ್ಕಾರಿ ವಲಯದಲ್ಲಿ 01 ಹುದ್ದೆ ಮತ್ತು ಖಾಸಗಿ ವಲಯದಲ್ಲಿ 17 ಅಭ್ಯರ್ಥಿಗಳು ಹುದ್ದೆ ಪಡೆದುಕೊಂಡಿದ್ದಾರೆ ಎಂದು ಉದ್ಯೋಗ ವಿನಿಮಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ತೋಟಗಾರಿಕೆ ಇಲಾಖೆಯಿಂದ ಯಾವುದೇ ಅನುದಾನ ಬಿಡುಗಡೆಯಾಗದಿದ್ದರೂ ಕಾಯ್ದಿರಿಸಿದ ಅನುದಾನದಲ್ಲಿ ಶೇ.15ರಷ್ಟು ಅನುದಾನ ಮೀಸಲಿರಿಸಿಟ್ಟು ತೋಟಗಾರಿಕೆ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಸಭೆಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಗೆ ನಿಗದಿಪಡಿಸಲಾದ ಗುರಿ ಸಾಧಿಸಬೇಕು;ಅದರ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಧಾನ ಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳ ಇಡೀ ರಾಜ್ಯದಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಿದ್ದು, ಯೋಜನೆಗಳು ಅಲ್ಪಸಂಖ್ಯಾತ ವರ್ಗದವರಿಗೆ ಸಮರ್ಪಕ ಮಾಹಿತಿ ಲಭ್ಯವಾಗುತ್ತಿದೆಯೇ? ಇಲ್ಲವೋ? ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಹಾಗೂ ಮಾಹಿತಿ ಕೊರತೆಯಿಂದ ಸೌಲಭ್ಯ ವಂಚಿತರಾಗಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಭ ಹೊನಕಾಂಡೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪದಾಧಿಕಾರಿಗಳು ಹಾಜರಿದ್ದರು.