ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 8 ವರ್ಷ: ಮನೆ-ಮನೆಗೆ ತೆರಳಿ ಕರಪತ್ರ ವಿತರಿಸಿದ ಸಚಿವ ಪ್ರಭು ಚವ್ಹಾಣ

ಬೀದರ:ಜು.21:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜುಲೈ 20 ರಂದು ಕಮಲನಗರ ತಾಲ್ಲೂಕಿನ ಬೇಡಕುಂದಾ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನೆ-ಮನೆಗೆ ತೆರಳಿ ಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು.
ಕಳೆದ 8 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ದೇಶವು ಅಭೂತಪೂರ್ವ ಬೆಳವಣಿಗೆ ಸಾಧಿಸಿದೆ ಎಂದು ಹೇಳಿದರು.
ರೈತರು, ಬಡವರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನತೆಯ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಸಚಿವರು ಹೇಳಿದರು.
ಬಿಜೆಪಿ ಔರಾದ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ಆಡಳಿತಕ್ಕೆ 8 ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸಾಕಷ್ಟು ಮಹತ್ವದ ಯೋಜನೆಗಳು ಜಾರಿಗೊಂಡಿವೆ. ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸಲು ಪಕ್ಷದಿಂದ ದೇಶಾದ್ಯಂತ ಅಭಿಯಾನ ನಡೆಯುತ್ತಿದೆ. ಈ ಕಾರ್ಯಕ್ರಮ ಔರಾದ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪ್ರತೀಕ್ ಚವ್ಹಾಣ, ಕಿರಣ ಪಾಟೀಲ, ದೊಂಢಿಬಾ ನರೋಟೆ, ಸಚಿನ ರಾಠೋಡ, ಉದಯ ಸೋಲಾಪುರೆ, ಬಾಬುರಾವ ರಂಡಾಳೆ, ಯಾದುರಾವ ರಂಡಾಳೆ, ಮಂಜು ಕಳಸೆ ಸೇರಿದಂತೆ ಇತರರು ಉಪಸ್ಥಿತರಿದ್ದರು.