ಪ್ರವೀಣ್‌ ನೆಟ್ಟಾರ್‌ ಹತ್ಯೆ: ಮತ್ತೋರ್ವನ ಬಂಧನ  

ಮಂಗಳೂರು, ನ.೧೪- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೋರ್ವ ಆರೋಪಿಯೋರ್ವನನ್ನು ಬಂಧಿಸಿದೆ.  

ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಾಯಕರು ಮತ್ತು ಸದಸ್ಯರು ಪರ್ವೀನ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ಇನ್ನು, ದಕ್ಷಿಣ ಕನ್ನಡದಲ್ಲಿ ಭಯೋತ್ಪಾದನಾ ನಿಗ್ರಹ ತನಿಖಾ ಸಂಸ್ಥೆ ಶನಿವಾರ ಶೋಧ ನಡೆಸಿದ್ದು ಬೆಳ್ಳಾರೆ ನಿವಾಸಿ ಶಹೀದ್ ಎಂ. ಅವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 302 ಮತ್ತು 34 ಮತ್ತು ಯುಎ (ಪಿ) ಎ (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಸೆಕ್ಷನ್ 16 ಮತ್ತು 18 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎನ್ಐಎ ಈ ವರ್ಷದ ಆಗಸ್ಟ್ 4 ರಂದು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಪ್ರಕರಣದಲ್ಲಿ ಇತರ 14 ಆರೋಪಿಗಳನ್ನು ಬಂಧಿಸಲಾಗಿದೆ. ಶೋಧದ ವೇಳೆ ಆರೋಪಿಯ ಮನೆಯಿಂದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್ಐಎ ತಿಳಿಸಿದೆ.