ಪ್ರಸಕ್ತ ಸಾಲಿನಲ್ಲಿ ಶೇಕಡಾ ನೂರರಷ್ಟು ಮಕ್ಕಳ ದಾಖಲಾತಿ-ಹಾಜರಾತಿಗೆ ಕ್ರಮ ವಹಿಸಿ:ಶಿಂಧೆ

ವಿಜಯಪುರ, ಮೇ.23 :2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವದ ಸಿದ್ಧತೆ ಮಾಡಿಕೊಂಡು ಪ್ರಸಕ್ತ ಸಾಲಿನಲ್ಲಿ ಶೇ.100 ರಷ್ಟು ಮಕ್ಕಳ ದಾಖಲಾತಿಗೆ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಜಿಲ್ಲೆಯ ಎಲ್ಲ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಿ.ಆರ್.ಪಿ, ಬಿ.ಆರ್.ಪಿ, ಇ.ಸಿ.ಓ, ಅಕ್ಷರ ದಾಸೋಹ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಾ ದೈಹಿಕ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಾ ವಿಶೇಷ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2023-24ನೇ ಸಾಲಿನ ಶೈಕ್ಷಣಿಕ ಮಾರ್ಗ ಸೂಚಿಯನ್ವಯ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು ಕ್ರಮ ವಹಿಸಬೇಕು. ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿ ಮಕ್ಕಳ ಆಧಾರ ಕಾರ್ಡ ಲಿಂಕ್ ಮಾಡಲು ಕ್ರಮ ಕೈಗೊಳ್ಳಬೇಕು. ಡುಪ್ಲಿಕೇಶನ ಆದಂತಹ ಮಕ್ಕಳ ದಾಖಲಾತಿ ಪರಿಶೀಲನೆ ನಡೆಸಿ ಡಿಲಿಟ್ ಮಾಡಲು ಕ್ರಮ ಕೈಗೊಳ್ಳಬೇಕು. ಮೇ. 29 ಹಾಗೂ ಮೇ30 ರಂದು ಶಾಲಾ ಸ್ವಚ್ಛತೆ ಹಾಗೂ ಶಾಲಾ ಪ್ರಾರಂಭೋತ್ಸವದ ಎಲ್ಲ ಪೂರ್ವಸಿದ್ದತೆಗಳನ್ನು ಕೈಗೊಂಡು ಮೇ.31ರಂದು ಮಕ್ಕಳನ್ನು ಹಾಗೂ ಅವರ ಪಾಲಕರಿಗೆ ಸಿಹಿ ಹಂಚುವ ಮೂಲಕ ಹಬ್ಬದ ವಾತಾವರಣ ಕಲ್ಪಿಸಿ ಶಾಲೆಗಳನ್ನು ಪ್ರಾರಂಭಿಸಬೇಕು. ದಾಖಲಾತಿ ಆಂದೋಲನದ ಮೂಲಕ ಗ್ರಾಮ ಪಂಚಾಯತಿ ಪಿ.ಡಿ.ಓ ಹಾಗೂ ಸದಸ್ಯರ ಸಹಕಾರದೊಂದಿಗೆ ಮನೆ-ಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ಕಳಿಸಿಕೊಡಲು ಪಾಲಕರಿಗೆ ಮನವೊಲಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ಬಗ್ಗೆ ಪರಿಶೀಲಿಸಿ, ಮಕ್ಕಳಿಗೆ ಪ್ರತಿ ದಿನ ಕ್ಷೀರ ಭಾಗ್ಯ ಹಾಗೂ ಅಕ್ಷರ ದಾಸೋಹ ಯೋಜನೆಯ ಪೂರ್ಣ ಸೌಲಭ್ಯ ತಲುಪಿಸಬೇಕು. ಸರಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಯ ಹಿನ್ನಲೆಯಲ್ಲಿ ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಂದಣಿಯಾಗದೇ ಇರುವ ಶಾಲಾ ಆಸ್ತಿಯನ್ನು ಸರಕಾರದ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳಲು ಕ್ರಮವಹಿಸಬೇಕು. ಕಟ್ಟಡ ಸುರಕ್ಷತೆ ಮತ್ತು ನಿರ್ವಹಣೆಗಾಗಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಶಾಲಾ ಕಟ್ಟಡಗಳ ದುರಸ್ಥಿಗಾಗಿ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾಮಗಾರಿಗಳ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಿದರು.
ಬಿ.ಇ.ಓ & ಬಿ.ಆರ್.ಪಿ, ಸಿ.ಆರ್.ಪಿ, ಬಿ.ಐ.ಇ.ಆರ್.ಟಿ ಹುದ್ದೆಗಳ ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಅದರಂತೆ ಇದೇ ಸಂದರ್ಭಧಲ್ಲಿ ಆರ್.ಬಿ.ಎಸ್.ಕೆ. ಯೋಜನೆಯಡಿ 680 ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆನೀಡಿ, ರಾಜ್ಯದಲ್ಲಿಯೆ ಮಾದರಿ ಎನಿಸುವ ಕಾರ್ಯ ನಿರ್ವಹಿಸಿದ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಪ್ರಕಸ್ತ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆ 11ನೇ ರ್ಯಾಂಕ್ ಪಡೆದಿರುವುದಕ್ಕೆ ಅಭಿನಂದಿಸಿದ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಟ್ಟು 60 ವಿದ್ಯಾರ್ಥಿಗಳಿಗೆ ಬೆಂಗಳೂರಿಗೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮೇಶ ಶಿರಹಟ್ಟಿಮಠ, ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿಗಳು ಎಚ್.ಜಿ.ಮಿರ್ಜಿ, ಎಲ್ಲ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಿ.ಆರ್.ಪಿ, ಬಿ.ಆರ್.ಪಿ, ಇ.ಸಿ.ಓ, ಅಕ್ಷರ ದಾಸೋಹ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಾ ದೈಹಿಕ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕಾ ವಿಶೇಷ ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.