ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

ಕೆ.ಆರ್.ಪೇಟೆ, ನ.04: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್(ರಿ) ರಾಜ್ಯದ ಸುಮಾರು 150 ತಾಲೂಕುಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು ಶಿಕ್ಷಕರು ಮತ್ತು ಶಿಕ್ಷಕರ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಮೂಲಕ ಅವರಿಗೆ ಗೌರವ ಸಲ್ಲಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾದುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಅವರು ಹೇಳಿದರು.
ಅವರು ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತಿನ ತಾಲ್ಲೂಕು ಘಟಕವು ತಾಲೂಕಿನಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸುವ ಮೂಲಕ ಸರ್ಕಾರಿ ಶಾಲೆಯ ದಾಖಲಾತಿಯನ್ನು ಹೆಚ್ಚಿಸಿ ಸರ್ಕಾರಿ ಶಾಲೆಯನ್ನು ಉಳಿಸಲು ಶ್ರಮಿಸಿರುವ 21 ಮಂದಿ ಶಾಲಾ ಮುಖ್ಯ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಹಾಗೂ ಈ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ಹೆಚ್ಚಿನ ಶ್ರಮ ವಹಿಸಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸುವಲ್ಲಿ ಮುಖ್ಯ ಶಿಕ್ಷಕರ ಪಾತ್ರ ಅಪಾರವಾಗಿರುತ್ತದೆ. ಇಂತಹ ಅತ್ಯುತ್ತಮ ಕೆಲಸ ಮಾಡಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಗ್ರಾಮಸ್ಥರ ಎಲ್ಲರ ಸಹಕಾರ ಪಡೆದು ಶಾಲೆಯ ಸಮಗ್ರ ಅಭಿವೃದ್ಧಿಗೆ ದುಡಿಯುತ್ತಿರುವ ನಮ್ಮ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ಪರಿಶ್ರಮವನ್ನು ಎಷ್ಟು ಹೊಗಳಿದರೂ ಕಡಿಮೆಯೇ ಇಂತಹ ಸರ್ವಶ್ರೇಷ್ಠ ಕೆಲಸ ಮಾಡಿರುವ ಮುಖ್ಯ ಶಿಕ್ಷಕರಿಗೆ ಶಿಕ್ಷಕರ ಪ್ರತಿಭಾ ಪರಿಷತ್ ತಾಲೂಕು ಘಟಕವು ಸನ್ಮಾನಿಸಿ ಗೌರವಿಸುತ್ತಿರುವುದಕ್ಕೆ ಸರ್ಕಾರದ ಪರವಾಗಿ ಪರಿಷತ್ ಪದಾಧಿಕಾರಿಗಳನ್ನು ಅಭಿನಂದಿಸುವುದಾಗಿ ಹೇಳಿದರು.
ಅದೇ ಶಿಕ್ಷಕರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದು ಅವರಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಮೂಲಕ ಸಾಧನೆಗೆ ಪ್ರೇರಕ ಶಕ್ತಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಇಂತಹ ಕಾರ್ಯಚಟುವಟಿಕೆಗಳು ಶಿಕ್ಷಕರ ಕ್ಷೇತ್ರದಲ್ಲಿ ಸದಾ ನಡೆಯುತ್ತಿರಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು ಪ್ರಶಂಸೆ ವ್ಯಕ್ತಪಡಿಸಿದರು.
ಸಚಿವರ ಆಪ್ತ ಕಾರ್ಯದರ್ಶಿ ದಯಾನಂದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.