ಪ್ರಾಮಾಣಿಕವಾಗಿ ಹೆಚ್ಚಿನ ಸೇವೆ ನೀಡಿ: ಶಿವಣ್ಣನವರ

ಬ್ಯಾಡಗಿ,ಮೇ30: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜೊತೆಯಾಗಿ ಕೆಲಸ ಮಾಡಿದರೆ ಜನರ ಸಮಸ್ಯೆಗಳನ್ನು ಪರಿಹರಿಸುವುದು ಸುಲಭ ಸಾಧ್ಯವಾಗಿದ್ದು, ಜನಸೇವೆ ಮಾಡುವ ಇಚ್ಛಾಶಕ್ತಿಯಿಂದ ಸಾಧ್ಯವಾದಷ್ಟು ಜನರಿಗೆ ಪ್ರಾಮಾಣಿಕವಾಗಿ ಹೆಚ್ಚಿನ ಸೇವೆ ನೀಡಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕ ಕಚೇರಿಯ ಸಭಾಭವನದಲ್ಲಿ ನಡೆದ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಮುಂಗಾರು ತಡವಾಗುತ್ತಿರುವ ಸೂಚನೆ ಇರುವ ಹಿನ್ನಲೆಯಲ್ಲಿ ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೊರದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂಗಾರು ಆರಂಭವಾದ ನಂತರ ಉಂಟಾಗಬಹುದಾದ ಪ್ರಾಕೃತಿಕ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸದಾ ಸನ್ನದ್ಧ ಸ್ಥಿತಿಯಲ್ಲಿರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಮೊಬೈಲ್ ಕರೆಗೆ ಸಿಗದಂತಹ ಪರಿಸ್ಥಿತಿ ಎದುರಾಗಬಾರದು. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಅಲ್ಲದೇ ರಸ್ತೆಬದಿ ಇರುವ ಮರಗಳ ರೆಂಬೆ ಕೊಂಬೆಗಳನ್ನು ಕಡಿಯುವ ಕೆಲಸ ಸಕಾಲದಲ್ಲಿ ಮುಗಿಸಿ, ಚರಂಡಿ ವ್ಯವಸ್ಥೆ ಸರಿಪಡಿಸಿಕೊಳ್ಳಬೇಕು. ಮಳೆಗಾಲದಲ್ಲಿ ನೀರು ಹರಿದು ಯಾವುದೇ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರಲ್ಲದೇ, ತಗ್ಗು ಪ್ರದೇಶಗಳು ಮತ್ತು ಮಳೆ ನೀರು ನಿಲ್ಲುವ ಪ್ರದೇಶಗಳಲ್ಲಿ ವಾಸ್ತವ್ಯ ಇರುವ ಜನತೆಗೆ ಮಳೆಗಾಲಕ್ಕೆ ಮುಂಚಿತವಾಗಿ ಮುಂಜಾಗ್ರತ ಕ್ರಮವಾಗಿ ಪರ್ಯಾಯ ವ್ಯವಸ್ಥೆಯನ್ನು ಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ ಎಸ್.ಎ.ಪ್ರಸಾದ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಸಿಪಿಐ ಬಸವರಾಜ ಸೇರಿದಂತೆ ವಿವಿಧ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.