ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಳಗಾವಿ, ಮಾ.16 : ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ನಡೆದ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ವಿವಿಧ ತಾಂಡಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
ಸರಕಾರಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವುದರ ಜತೆಗೆ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಮಲಪ್ರಭೆ ನದಿತೀರದಲ್ಲಿ ಪ್ರವಾಹಹಾನಿ ತಪ್ಪಿಸಲು 125 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ.
ಬೆಳೆಹಾನಿ ಪರಿಹಾರವಾಗಿ ಕೇಂದ್ರ ಸರಕಾರ ನೀಡುವ ಪರಿಹಾರಧನದ ಎರಡು ಪಟ್ಟು ಪರಿಹಾರವನ್ನು ರಾಜ್ಯ ಸರಕಾರ ನೀಡಿರುವುದು ದೇಶದಲ್ಲೇ ಮೊದಲು. ಇದು ನಮ್ಮ ಸರಕಾರದ ಬದ್ಧತೆಯಾಗಿದೆ.
ಹಿಂದಿನಂತೆ ಬಾಯಿಮಾತಿನಲ್ಲಿ ಪರಿಹಾರ ನೀಡುವ ಸರಕಾರ ಇದಲ್ಲ; ಪ್ರತಿಯೊಂದು ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಮೂಲಕ ಜನರ ಸಮಸ್ಯೆಗಳ ನಿವಾರಣೆಗೆ ಶ್ರಮಿಸಲಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುತುವರ್ಜಿಯಿಂದ ಹತ್ತಾರು ಕಾನೂನು ತೊಡಕುಗಳನ್ನು ಬಗೆಹರಿಸಿದ ಪರಿಣಾಮ ಇಂದು ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ದೊರೆತಿದೆ. ಇದರಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಅವರ ಶ್ರಮ ಕೂಡ ಬಹಳಷ್ಟಿದೆ ಎಂದು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಮದುರ್ಗ ಶಾಸಕರಾದ ಮಹಾದೇವಪ್ಪ ಯಾದವಾಡ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಮದುರ್ಗ ತಾಲ್ಲೂಕಿಗೆ ಒಟ್ಟಾರೆ 3100 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ತಾಲ್ಲೂಕಿನ ಉಳಿದ ತಾಂಡ ಹಾಗೂ ಕೆಲ ಗ್ರಾಮಗಳನ್ನು ಕಂದಾಯ ಗ್ರಾಮವೆಂದು ಘೋಷಿಸಬೇಕು ಎಂದು ಮನವಿ ಮಾಡಿಕೊಂಡರು.
ರಾಮದುರ್ಗ ತಾಲ್ಲೂಕಿನ ಐದು ಗ್ರಾಮಗಳು ಸೇರಿದಂತೆ ಜಿಲ್ಲೆಯ 75 ಗ್ರಾಮಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಿರುವುದಕ್ಕೆ ಶಾಸಕ ಮಹಾದೇವಪ್ಪ ಯಾದವಾಡ ಅವರು ಸಂತಸ ವ್ಯಕ್ತಪಡಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮಾತನಾಡಿ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಹಸಿರುನಿಶಾನೆ ಪಡೆಯಲು ಮುಖ್ಯಮಂತ್ರಿಗಳ ವಿಶೇಷ ಪ್ರಯತ್ನವೇ ಕಾರಣವಾಗಿದೆ. ಡಿಪಿಆರ್ ಗೆ ಅನುಮೋದನೆ ಪಡೆಯುವುದರ ಜತೆಗೆ ಯೋಜನೆ ಅನುಷ್ಠಾನಕ್ಕೆ ಒಂದು ಸಾವಿರ ಕೋಟಿ ರೂಪಾಯಿ ತೆಗೆದಿರಿಸುವ ಮೂಲಕ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಹೇಳಿದರು.
ರೈಲು ಯೋಜನೆ, ನೀರಾವರಿ ಯೋಜನೆಗಳಿಗೆ ಸಾಕಷ್ಟು ಆದ್ಯತೆ ನೀಡಿದ್ದಾರೆ. ಸಂಗೊಳ್ಳಿಯ ಸೈನಿಕ ಶಾಲೆ, ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ, ಕಿತ್ತೂರು-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದಾರೆ ಎಂದು ಕಡಾಡಿ ಹೇಳಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ವಾಗತಿಸಿದರು. ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳ ಸಾವಿರಾರು ಫಲಾನುಭವಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.