ಫಲಾನುಭವಿಗಳ ನೊಂದಣಿಗೆ ಸಕಲ ಸಿದ್ಧತೆ

(ಸಂಜೆವಾಣಿ ವಾರ್ತೆ)
ಬಾಗಲಕೋಟೆ,ಜು17: ಪ್ರತಿ ಮನೆ ಯಜಮಾನಿಗೆ ಮಾಹೆಯಾನ 2 ಸಾವಿರ ರೂ.ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಜುಲೈ 19 ರಂದು ಚಾಲನೆ ನೀಡಲಾಗುತ್ತಿದ್ದು, ಜಿಲ್ಲೆಯಾದ್ಯಂತ ಫಲಾನುಭವಿಗಳ ನೊಂದಣಿಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೊಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿಗಳ, ಜಿ.ಪಂ ಸಿಇಓಗಳ ಜೊತೆ ಚರ್ಚೆ ನಡೆಸಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು ಜುಲೈ 19 ರಂದು ಸಂಜೆ ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡಲಿದ್ದು, ಜುಲೈ 20 ರಿಂದ ಗೃಹಲಕ್ಷ್ಮೀ ಫಲಾನುಭವಿಗಳು ಜಿಲ್ಲೆಯಲ್ಲಿರುವ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ನೋಂದಣಿ ಪ್ರಾರಂಭವಾಗಿದೆ ಎಂದು ಏಕ ಕಾಲದಲ್ಲಿ ಮಹಿಳಾ ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ಹೋಗುವಂತಿಲ್ಲ. ಪ್ರತಿ ದಿನ ಒಂದು ಕೇಂದ್ರದಲ್ಲಿ 60 ಫಲಾನುಭವಿಗಳ ನೊಂದಣಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿರುವ ಪಡಿತರ ಚೀಟಿ ಕಾರ್ಡಗಳು ಹಾಗೂ ಮಹಿಳೆಯ ಮನೆಯ ಯಜಮಾನಿಯಾಗಿರುವ ಬಗ್ಗೆ ಈಗಾಗಲೇ ಮಾಹಿತಿಯನ್ನು ಸಂಗ್ರಹಿಸಲಾಗಿದ್ದು, ಮಹಿಯರು ತಾವು ಯಾವ ನೋಂದಣಿ ಕೇಂದ್ರದಲ್ಲಿ ಮತ್ತು ಯಾವ ದಿನಾಂಕದಂದು ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಆಧಾರ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಸಂದೇಶ ನೀಡಲಾಗುತ್ತದೆ ಆ ದಿನದಂದು ಸೇವ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಲು ತಿಳಿಸಿದರು.
ನೊಂದಣಿ ಸಮಯದಲ್ಲಿ ಉಂಟಾಗುವ ಗೊಂದಲಗಳ ನಿವಾರಣೆಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿ.ಪಂ ಕಚೇರಿ, ತಹಶೀಲ್ದಾರ ಕಚೇರಿ ಹಾಗೂ ತಾ.ಪಂ ಕಚೇರಿಗಳಲ್ಲಿ ಉಚಿತ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಸಹಾಯವಾಣಿ ಸಂಖ್ಯೆ 1902 ಗೆ ಕರೆ ಹಾಗೂ ಮೊನಂ.8147500500ಗೆ ಎಸ್.ಎಂ.ಎಸ್ ಕೂಡಾ ಮಾಡಬಹುದಾಗಿದೆ. ಭಾನುವಾರದ ರಜೆ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲಿಯೂ ನೊಂದಣಿ ಪ್ರಕ್ರಿಯೆ ನಡೆಯಲಿದೆ. ಸುಗಮ ನೊಂದಣಿಗೆ ಅನುಕೂಲವಾಗುವಂತೆ ಅಗತ್ಯವಿರುವ ಕಂಪ್ಯೂಟರ, ಪ್ರಿಂಟರ್, ಅಂತರ್ಜಾಲ ಸಂಪರ್ಕ ಸೇರಿದಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಮೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪಣಾಧಿಕಾರಿ ಅಮರೇಶ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಶಿಲ್ಪಾ ಹಿರೇಮಠ, ಅನ್ನಪೂರ್ಣ ಕುಬಕಡ್ಡಿ, ಎಂ.ಡಿ.ದಾಸರ, ಬಸವಲಿಂಗಪ್ಪ ಕವಟೆಕರ, ದಸ್ತಗಿರಿಸಾಬ ಮುಲ್ಲಾ, ಸೇವಾ ಸಿಂಧು ಜಿಲ್ಲಾ ಯೋಜನಾ ವ್ಯವಸ್ಥಾಪಕ ಸ್ವಾಗತ ಗುಡಗುಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.