ಫೆ.18 ರಂದು ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ತರಬೇತಿ ಆಯ್ಕೆಗೆ ಪ್ರವೇಶ ಪರೀಕ್ಷೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಫೆ.೧೬; ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಯುಪಿಎಸ್‍ಸಿ, ಕೆಎಎಸ್, ಗ್ರೂಪ್-ಸಿ, ಎಸ್.ಎಸ್.ಸಿ, ಬ್ಯಾಂಕಿಗ್ ಹಾಗೂ ಆರ್.ಆರ್.ಬಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಇದೇ ಫೆ.18 ರಂದು ಜರುಗುವ ಪ್ರವೇಶ ಪರೀಕ್ಷೆ ಕಾರ್ಯಗಳನ್ನು ಸಮನ್ವಯದಿಂದ ನಿರ್ವಹಿಸುವಂತೆ ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜರುಗಿದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 06 ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆ. 18 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ.ಸಮಾಜ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಬೆಳಿಗ್ಗೆ 10:30 ರಿಂದ 12:30 ವರೆಗೆ ಯುಪಿಎಸ್‍ಸಿ, ಕೆಎಎಸ್ ಗ್ರೂಪ್ ಸಿ, ಪ್ರವೇಶ ಪರೀಕ್ಷೆ, ಮಧ್ಯಾಹ್ನ 2:30 ರಿಂದ 4:30 ವರೆಗೆ ಎಸ್.ಎಸ್.ಸಿ, ಬ್ಯಾಂಕಿಗ್ ಹಾಗೂ ಆರ್.ಆರ್.ಬಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲಿದೆ.ಪರೀಕ್ಷೆ ಕಾರ್ಯಗಳಲ್ಲಿ ಲೋಪ ಉಂಟಾಗಬಾರದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಪರೀಕ್ಷೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗುವುದು. ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು. ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ಶೀಟ್ ಗಳನ್ನು ಕೊಂಡೊಯ್ಯುವ ಮಾರ್ಗಾಧಿಕಾರಿಗಳ ತಂಡಗಳ ರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಕ್ಯಾಲುಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್‍ಲೆಸ್ ಸೆಟ್ಸ್ ಸೇರಿದಂತೆ ಇತರೆ ಉಪಕರಣ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ತೋರಿಸಿದವರನ್ನು ಮಾತ್ರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅವಕಾಶ ನೀಡಬೇಕು. ಪರೀಕ್ಷೆ ಮುಗಿದ ನಂತರ ಬಳಸಿದ ಓಎಂಆರ್, ಬಳಸದ ಓಎಂಆರ್ ಹಾಗೂ ನಾಮಿನಲ್ ರೋಲ್‍ಗಳನ್ನು ಪ್ರತ್ಯೇಕವಾಗಿ ಬಂಡಲ್ ಮಾಡಿ, ನಂತರ ಮೂರು ಬಂಡಲ್‍ಗಳನ್ನು ಒಂದು ಬಂಡಲ್ ಮಾಡಿ ಮಾರ್ಗಾಧಿಕಾರಿಗಳಿಗೆ ಹಸ್ತಾಂತರಿಸಬೇಕು. ಫೆ.18 ರಂದು ಭಾನುವಾರವಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ಪ್ರಧಾನ ಅಂಚೆ ಕಚೇರಿಗಳನ್ನು, ಮಾರ್ಗಾಧಿಕಾರಿಗಳು ಆಗಮಿಸಿ ಉತ್ತರ ಪತ್ರಿಕೆ ಬಂಡಲ್ ನೀಡುವವರೆಗೂ ತೆರದಿರಬೇಕು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ನಿರ್ದೇಶನ ನೀಡಿದರು.ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಫೆ. 18 ರಂದು ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 17 ಪರೀಕ್ಷಾ ಕೇಂದ್ರಗಳಿದ್ದು, 6,234 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಚಿತ್ರದುರ್ಗ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ಜರುಗಲಿದ್ದು, ಬೆಳಗಿನ ಅವಧಿಗೆ 1,880 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ಅವಧಿಗೆ 1,069 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗುವರು. ಪರೀಕ್ಷಾ ಅಕ್ರಮಗಳನ್ನು ತಡೆಯುವ ಸಲುವಾಗಿ ಜಾಗೃತ ದಳಗಳನ್ನು ನೇಮಿಸಲಾಗಿದೆ. ಇದರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಸಹ ಸಿಟಿಂಗ್ ಸ್ಕ್ವಾಡ್‍ಗಳನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ಸಹ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್, ತಿಪ್ಪೇಸ್ವಾಮಿ, ಪೊಲೀಸ್ ಇಲಾಖೆ ಗುಡ್ಡಪ್ಪ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.