
ಬೆಂಗಳೂರು, ಫೆ.೨೨- ರಾಜ್ಯ ರಾಜಧಾನಿ ಬೆಂಗಳೂರಿನ ಸೌಂದರ್ಯಕ್ಕೆ ಹಾಗೂ ಪರಿಸರಕ್ಕೆ ಧಕ್ಕೆ ಉಂಟು ಮಾಡುವ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕ್ರಮ ಜರುಗಿಸದ ಸ್ಥಳೀಯ ಅಧಿಕಾರಿಗಳ ವಿರುಧ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಲಯವಾರು ಬ್ಯಾನರ್, ಫ್ಲೆಕ್ಸ್ ಅಳವಡಿಕೆ ವಿರುದ್ಧ ಕಾರ್ಯಾಚರಣೆ ನಡೆಸಿ, ಎಲ್ಲವನ್ನು ಕಿತ್ತು ಎಸೆಯಲಾಗುತ್ತಿದೆ. ಇದೀಗ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗದಿದ್ದರೆ, ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು
ಈಗಾಗಲೇ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು.ಅದರಂತೆ ನಿಯಮ ಉಲ್ಲಂಘನೆ ಆಗದಂತೆ ನಾವು ಕ್ರಮ ವಹಿಸುತ್ತಿದ್ದೇವೆ ಎಂದು ನುಡಿದರು.
ಇನ್ನೂ, ನಗರದಲ್ಲಿ ಭೀಕರ ಪ್ರವಾಹ, ಹದಗೆಟ್ಟ ರಸ್ತೆಗಳು ಮತ್ತು ನಾಗರಿಕ ಸೌಕರ್ಯಗಳ ಬಗ್ಗೆ ದೂರುಗಳು, ಸಂಚಾರ ದಟ್ಟಣೆ ಸಮಸ್ಯೆ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲು ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.