ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ‌ ನಿಧನ

ಬೆಂಗಳೂರು,ಜೂ.11-ಕನ್ನಡದ ಬಂಡಾಯ ಸಾಹಿತಿ ಎಂದೇ ಪ್ರಸಿದ್ಧರಾದ ನಾಡೋಜ‌ ಡಾ. ಸಿದ್ದಲಿಂಗಯ್ಯ‌ ಅವರು ನಿಧನರಾಗಿದ್ದಾರೆ ಕೋವಿಡ್ ಸೋಂಕು ಕಾಣಿಸಿಕೊಂಡ ನಂತರ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ದಲಿತ ಕವಿ ಎಂದೇ ಪ್ರಸಿದ್ಧರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ- ಬರವಣಿಗೆಗಳಲ್ಲೇ ತೊಡಗಿಕೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾಗಡಿಯ ಮಂಚಿನಬೆಲೆಯಲ್ಲಿ 1954ರಲ್ಲಿ ಜನಿಸಿದ್ದರು‌. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು‌. ತಮ್ಮ ಸಾಹಿತ್ಯ, ಕವಿತೆಗಳ ಕೊಡುಗೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆಸಲ್ಲಿಸಿದ್ದರು.
ಊರುಕೇರಿ ಎನ್ನುವ ಎರಡು ಭಾಗಗಳ‌ ಆತ್ಮಕಥೆ ರಚಿಸಿದ್ದಲ್ಲದೇ ಹಲವು ಚಿತ್ರಗಳಿಗೆ ಸಾಹಿತ್ಯ ಬರೆದಿದ್ದರು.