ಬಜೆಟ್ ಮಂಡನೆಗೆ ಸಿದ್ದು ಸಭೆ

ಬೆಂಗಳೂರು,ಜೂ.೧೪: ವಿಧಾನಸಭೆಯಲ್ಲಿ ಜುಲೈ ೭ ರಂದು ರಾಜ್ಯ ಸರ್ಕಾರದ ಹೊಸ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಿದ್ದಾರೆ.ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್‌ನ್ನು ಮಂಡಿಸಲು ನಿರ್ಧರಿಸಿದರು. ಅದರಂತೆ ಜು. ೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.
ಈ ಸಭೆಗಳಲ್ಲಿ ವಿವಿಧ ಇಲಾಖೆಗಳ ಸಚಿವರುಗಳ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡು ತಮ್ಮ ಇಲಾಖೆಗೆ ಸಂಬಂಧಿಸಿದ ಬಜೆಟ್ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರದ ಬಜೆಟ್ ಗಾತ್ರ, ಯಾವೆಲ್ಲ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ಅಳವಡಿಸಿ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳಿಗೆ ಹಣಕಾಸು ಒದಗಿಸುವ ಸಂಬಂಧ ಮುಖ್ಯಮಂತ್ರಿಗಳು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗಿನಿಂದಲೇ ವಿವಿಧ ಇಲಾಖೆಗಳ ಸರಣಿ ಸಭೆ ನಡೆಸಿದ್ದು, ರಾತ್ರಿಯವರೆಗೂ ಸಭೆ ನಡೆಯಲಿದೆ.
ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ, ಪರಿಸರ ಇಲಾಖೆಗಳ ಮುಖ್ಯಸ್ಥರ ಜತೆ ಮುಖ್ಯಮಂತ್ರಿಗಳು ಮಧ್ಯಾಹ್ನದವರೆಗೂ ಚರ್ಚೆ ನಡೆಸಿದ್ದು, ಮಧ್ಯಾಹ್ನದ ನಂತರ ಜಲಸಂಪನ್ಮೂಲ, ಸಣ್ಣ ನೀರಾವರಿ, ಅರಣ್ಯ, ಸಾರ್ವಜನಿಕ ಸಂಪರ್ಕ, ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯಸ್ಥರು ಹಾಗೂ ಸಚಿವರೊಂದಿಗೆ ಸಭೆ ನಡೆಸುವರು.