ಬರಪರಿಹಾರ ಬಿಡುಗಡೆಗೆ ಕೇಂದ್ರ ಅಸ್ತು

ನವದೆಹಲಿ, ಏ. ೨೨- ಕೇಂದ್ರ ಚುನಾವಣಾ ಆಯೋಗದಿಂದ ಅನುಮತಿ ಪಡೆದು ಕರ್ನಾಟಕದಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಏ. ೨೯ರೊಳಗೆ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಇಂದು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧದ ಕಾನೂನು ಸಮರದಲ್ಲಿ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಂತಾಗಿದೆ. ಮುಂದಿನ ವಿಚಾರಣೆಯನ್ನು ಏ. ೨೯ಕ್ಕೆ ಮುಂದೂಡಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ಇಂದು ಮುಂದುವರಿಸಿದ ನ್ಯಾಂiiಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದರು.
ಬರ ಪರಿಹಾರ ಅನುದಾನ ಬಿಡುಗಡೆ ಮಾಡುವ ಸಂಬಂಧ ಚುನಾವಣೆ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಅಟಾರ್ನಿ ಜನರಲ್ ನ್ಯಾಯಪೀಠಕ್ಕೆ ವಿವರಿಸಿದರು.
ವಿಚಾರಣೆ ಸಂದರ್ಭದಲ್ಲಿ ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏ. ೨೯ಕ್ಕೆ ಮೂಂದೂಡಿತು.
ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ ೨೦೨೩ ಡಿಸೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ರಾಜ್ಯದ ೨೩೬ ತಾಲ್ಲೂಕುಗಳ ಪೈಕಿ ೨೨೩ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಅದರಲ್ಲೂ ೧೯೬ ತಾಲ್ಲೂಕುಗಳಲ್ಲಿ ಬರದ ತೀವ್ರತೆ ಬಿಗಾಡಯಿಸಿದೆ. ಈ ಹಿನ್ನೆಲೆಯಲ್ಲಿ ೪೮.೧೯ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಇದರಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಟ್ಟಿತ್ತು.
ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ೧೮,೧೨೭.೪೪ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಅನುದಾನದಲ್ಲಿ ೪,೬೬೩ ಕೋಟಿ ರೂ. ಇನ್ ಫುಟ್ ಸಬ್ಸಿಡಿ ೧೨,೫೭೭ ಕೋಟಿ ರೂ. ತುರ್ತು ಪರಿಹಾರ ನೀಡಬೇಕು. ಕುಡಿಯುವ ನೀರಿಗಾಗಿ ೫೬೬ ಕೋಟಿ ರೂ. ಹಾಗೂ ಜಾನುವಾರುಗಳ ಸಂರಕ್ಷಣೆಗಾಗಿ ೩೬೩ ಕೋಟಿ ರೂ.ಒದಗಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು.
ಆದರೆ ೩ ತಿಂಗಳಾದರೂ ಕೇಂದ್ರದಿಂದ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಖಂಡಿಸಿ, ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.
ಆದರೂ ಕೇಂದ್ರ ಸರ್ಕಾರ ಬರ ಪರಿಹಾರ, ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿತು.