(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೮- ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳನ್ನಾಗಿ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ವಿಧಾನಸಭೆಯಲ್ಲಿಂದು ಹೇಳಿದರು.ರಾಜ್ಯದ ಬರಪರಿಸ್ಥಿತಿಯ ಬಗ್ಗೆ ನಿಲುವಳಿ ಸೂಚನೆಯಡಿ ಪೂರ್ವಭಾವಿ ಪ್ರಸ್ತಾಪ ಮಾಡಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ಮುಂಗಾರು ಮಳೆ ಕೊರತೆಯಾಗಿದೆ. ಬಿತ್ತನೆಯೂ ಆಗಿಲ್ಲ. ಮುಂಗಾರು ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು ೭ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು .ಆದರೆ ಮಳೆ ಕೊರತೆಯಿಂದ ೧.೧೪ ಹೆಕ್ಟೇರ್ ಪ್ರದೇಶಧಲ್ಲಿ ಬಿತ್ತನೆಯಾಗಿದೆ ಎಂದರು.ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹೊಡೆತ ಬಿದ್ದಿದೆ. ಇದು ರೈತರ ಆದಾಯಕ್ಕೂ ಸಂಚಾಕಾರ ತರುವ ಜತೆಗೆ ರಾಜ್ಯದ ಆರ್ಥಿಕತೆ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಮಳೆ ಕೊರತೆಯಾಗಿರುವ ಭಾಗಗಳನ್ನು ಬರಗಾಲ ಎಂದು ಘೋಷಣೆ ಮಾಡಿ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದರು.ಬರ ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ೧ ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಇದು ಸಾಲದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ೧ ಕೋಟಿ ರೂ. ಹಣವನ್ನು ಕುಡಿಯು ನೀರಿಗೆ ಮೀಸಲಿರಿಸುವಂತೆ ಅವರು ಒತ್ತಾಯಿಸಿದರು.ಬರದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೃಷಿಸಚಿವರು ಈ ಹಿಂದೆ ನಡೆದಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಹೋಲಿಸಿ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ರೈತು ಆತ್ಮಸ್ಥೈರ್ಯವನ್ನೇ ಕ ಳೆದುಕೊಳ್ಳುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡಿ. ಬರದ ಬಗ್ಗೆ ಮಾತಾಡುತ್ತೇವೆ ಎಂದು ಸಭಾಧ್ಯಕ್ಷರಲ್ಲಿ ಬಸವರಾಜಬೊಮ್ಮಾಯಿ ಮನವಿ ಮಾಡಿದರು.
ಈ ವಿಚಾರವನ್ನು ನಿಯಮ ೬೦ರಡಿಯಲ್ಲಿ ಚರ್ಚೆ ಮಾಡಲು ಆಗಲ್ಲ. ನಿಮ್ಮ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇನೆ. ಆದರೆ ಈ ಬಗ್ಗೆ ಅರ್ಧ ಗಂಟೆ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿ, ಬರ ಕುರಿತ ಚರ್ಚೆಗೆ ಸದನದಲ್ಲಿ ಸಮಯ ನಿಗದಿ ಮಾಡುವುದಾಗಿಯೂ ತಿಳಿಸಿದರು.