ಬರ ನಿರ್ವಹಣೆ ಕೆಲಸದ ಕಡೆ ಗಮನ ಕೊಡಿ

ಗದಗ ,ಮೇ.24 : ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿರುವುದರಿಂದ ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲೆಯ ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಗೃಹ ಕಚೇರಿ “ಕೃಷ್ಣಾ” ದಿಂದ ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಡಿ.ಸಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಡಿ.ಸಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಇದರ ಮೇಲುಸ್ತುವಾರಿ ವಹಿಸಬೇಕು ಎಂದರು.

ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಬೇಕು. ರಾಜ್ಯದಲ್ಲಿ ದಾಸ್ತಾನು ಸಾಕಷ್ಟಿದೆ. ಆದರೆ ಜಿಲ್ಲಾ, ತಾಲೂಕಿಗೆ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ರೂಪಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು . ಈ ಕುರಿತು ರೈತರಿಂದ ದೂರು ಬಾರದಂತೆ ನೋಡಿಕೊಳ್ಳಬೇಕು. ಹಾವೇರಿಯಲ್ಲಿ ಬಿತ್ತನೆ ಬೀಜಕ್ಕೆ ಜನ ಕ್ಯೂ ನಿಂತಿರುವುದು ಮಾಧ್ಯಮ ಮುಖಾಂತರ ತಿಳಿದುಬಂದಿದೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆಗಾರರಾಗುತ್ತಾರೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು.

ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿ0iÉ? ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಸಿ.ಎಂ. ಅವರೊಂದಿಗೆ ಭಾಗಿಯಾಗಿದ್ದರು.

ಗದಗ ಜಿಲ್ಲೆಯಿಂದ ಡಿ.ಸಿ. ಜೊತೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಸುರೇಖಾ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಸೇರಿ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.