ಬರ ಪರಿಹಾರಕ್ಕೆ ಕೈ ಪ್ರತಿಭಟನೆ

ಬರ ಪರಿಹಾರದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಇಂದು ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

ಬೆಂಗಳೂರು, ಏ. ೨೩- ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನಾ ಧರಣಿ ನಡೆಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವರುಗಳು, ಕಾಂಗ್ರೆಸ್ ಶಾಸಕರುಗಳು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿ ಬರ ಪರಿಹಾರ ಹಣ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ೨೨೩ ತಾಲ್ಲೂಕುಗಳಲ್ಲಿ ಬರ ಇದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿ ಹಲವು ತಿಂಗಳುಗಳಾದರೂ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಭಟನಾ ಧರಣಿ ನಡೆಸಲಾಯಿತು.
ಕೇಂದ್ರ ಸರ್ಕಾರ ನಿನ್ನೆಯಷ್ಟೆ ಸುಪ್ರೀಂಕೋರ್ಟ್‌ನಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆದು ಬರುವ ಸೋಮವಾರದೊಳಗೆ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದೆ. ಇದರ ಬೆನ್ನಲ್ಲೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಡೀ ಕಾಂಗ್ರೆಸ್ ನಾಯಕರು ಧರಣಿ ನಡೆಸಿ ಕೇಂದ್ರದ ಮಲತಾಯಿ ಧೋರಣೆ ತಾರತಮ್ಯದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕೇಂದ್ರದ ಅನ್ಯಾಯದ ವಿರುದ್ಧ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜಾಹೀರಾತುಗಳ ಮೂಲಕ ಸಮರ ಸಾರಿ ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿರುವುದು ಚೊಂಬು ಎಂಬ ಜಾಹೀರಾತು ನೀಡಿ ಇಡೀ ರಾಜ್ಯದ ಗಮನ ಸೆಳೆದಿದ್ದ ಕಾಂಗ್ರೆಸ್ ಪಕ್ಷ ಈಗ ಕೇಂದ್ರದ ವಿರುದ್ಧ ಮತ್ತೆ ಪ್ರತಿಭಟನೆಯ ಅಸ್ತ್ರವನ್ನು ಕೈಗೆತ್ತಿಕೊಂಡಿದೆ.
ಹಣ ಕೊಡಿ ಸಿಎಂ ಆಗ್ರಹ
ಕೇಂದ್ರ ಸರ್ಕಾರ ಈ ಕೂಡಲೇ ರಾಜ್ಯಕ್ಕೆ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಧರಣಿ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗ್ರಹಿಸಿದರು.
ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ನೀಡದ ಕಾರಣ ನಾವು ಸುಪ್ರೀಂಕೋರ್ಟ್‌ನ ಮೊರೆ ಹೋಗಬೇಕಾಯಿತು. ಸುಪ್ರೀಂಕೋರ್ಟ್‌ನಲ್ಲೂ ಹಣ ಬಿಡುಗಡೆ ಮಾಡುವುದಾಗಿ ನಿನ್ನೆ ಹೇಳಿದೆ. ಆದರೆ ಇದುವರೆಗೂ ಹಣ ನೀಡಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕನ್ನಡಿಗರ ಮತ ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.
ಕೇಂದ್ರದ ಈ ತಾರತಮ್ಯ ನೀತಿ ಸರಿಯಲ್ಲ. ರಾಜ್ಯದಲ್ಲಿ ಭೀಕರ ಬರ ಇದೆ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಕೂಡಲೇ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಬರಪರಿಹಾರ ಹಣ ಬಿಡುಗಡೆ ವಿಳಂಬ, ಅನುದಾನ ಕಡಿತ, ತೆರಿಗೆ ಹಂಚಿಕೆಯಲ್ಲೂ ಅನ್ಯಾಯ ಹೀಗೆ ಕೇಂದ್ರದಿಂದ ರಾಜ್ಯಕ್ಕೆ ಏನೆಲ್ಲಾ ಅನ್ಯಾಯವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಳೆಎಳೆಯಾಗಿ ಬಿಡಿಸಿಟ್ಟರು.
ಇಂದು ಗಾಂಧಿಪ್ರತಿಮೆ ಬಳಿ ಬರಪರಿಹಾರ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಕೂಡಲೇ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿಯೂ ಸಿದ್ಧರಾಮಯ್ಯ ಹೇಳಿದರು.
ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ ಹೊಂದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಮಲತಾಯಿ ಧೋರಣೆ ವಿರುದ್ಧ ಇಂದು ಸಾಂಕೇತಿಕ ಧರಣಿ ಮಾಡುತ್ತಿದೆ. ಬರ ಪರಿಹಾರ ಹಣ ಬಿಡುಗಡೆ ಮಾಡದಿದ್ದರೆ ಕೇಂದ್ರದ ವಿರುದ್ಧ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದರು.
ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದು ವಿಳಂಬವಾದ್ದರಿಂದ ಬರಪರಿಹಾರ ಹಣ ಕೊಟ್ಟಿಲ್ಲ ಎಂದು ಕೇಂದ್ರ ಸಚಿವರುಗಳಾದ ಅಮಿತ್ ಮತ್ತು ನಿರ್ಮಲಾ ಸೀತಾರಾಮನ್ ಹೇಳಿರುವುದು ಸುಳ್ಳು. ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳೆದ ಸೆಪ್ಟೆಂಬರ್ ೨೨ ರಂದು ಮನವಿ ಸಲ್ಲಿಸಿ ಸುಮಾರು ೧೮ ಸಾವಿರ ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಮನವಿ ಮಾಡಿತ್ತು ಎಂದು ಮುಖ್ಯಮಂತ್ರಿಗಳು ಹೇಳಿದರು.
ರಾಜ್ಯ ಸರ್ಕಾರಕ್ಕೆ ಬರ ನಿರ್ವಹಣೆಗೆ ಹಣ ನೀಡಿದರೆ ಅದನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಾರೆ ಎಂದು ಕೇಂದ್ರ ಸಚಿವರು ಅಪಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ. ಕೇಂದ್ರದಿಂದ ಬರ ಪರಿಹಾರ ಹಣ ಬಂದ ನಂತರ ಆ ಹಣವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡುತ್ತೇವೆ. ಗ್ಯಾರಂಟಿ ಯೋಜನಗಳಿಗೆ ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಕೇಂದ್ರದಿಂದ ಬರುವ ಹಣವನ್ನು ಸಂಪೂರ್ಣವಾಗಿ ಬರನಿರ್ವಹಣೆಗೆ ಖರ್ಚು ಮಾಡುತ್ತೇವೆ. ಹಣ ಬಿಡುಗಡೆ ಮಾಡಲು ಕೇಂದ್ರ ಸಬೂಬು ಹೇಳುತ್ತಿರುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಮೊದಲು ಹಣ ಬಿಡುಗಡೆ ಮಾಡಲಿ ನಂತರ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಬಂದ ಮತ ಕೇಳಲಿ. ಚುನಾವಣಾ ಬಂದಾಗಷ್ಟೇ ಕೇಂದ್ರದ ಬಿಜೆಪಿ ನಾಯಕರಿಗೆ ಕರ್ನಾಟಕ ನೆನಪಾಗುತ್ತದೆ. ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಪುನರುಚ್ಛರಿಸಿದರು.
ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರುಗಳಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್‌ನ ಹಲವು ಶಾಸಕರು, ಮುಖಂಡರುಗಳು ಪಾಲ್ಗೊಂಡಿದ್ದರು.