ಬಳ್ಳಾರಿ ಲೋಕಸಭಾ ಚುನಾವಣೆ ಉಮೇದುವಾರಿಕೆ ಸಲ್ಲಿಕೆ ಆರಂಭ, ಏ.19 ಕೊನೆಯ ದಿನ


ಬಳ್ಳಾರಿ,ಏ.12: 09 – ಬಳ್ಳಾರಿ (ಪ.ಪಂ) ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಮೇ 07 ರಂದು ನಡೆಯಲಿರುವ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟಗೊಂಡಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ, ಏ.19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.
ಜಿಲ್ಲಾಡಳಿತ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ 09-ಬಳ್ಳಾರಿ(ಪ.ಪಂ) ಲೋಕಸಭಾ ಕ್ಷೇತ್ರದ ಅಧಿಸೂಚನೆ ಪ್ರಕಟ ಸಂಬಂಧ ಕರೆದಿದ್ದ ಸುದ್ಧಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಎರಡನೇ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ಇನ್ನುಳಿದ ದಿನಗಳಲ್ಲಿ   ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆಯವರೆಗೆ ಏ.19 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ಏ.20 ರಂದು ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಹೇಳಿದರು.
ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕ್ರಮಬದ್ಧ ನಾಮಪತ್ರ ಸಲ್ಲಿಸಬೇಕು, ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ 144ರ ಸೆಕ್ಷನ್ ಕಾಯ್ದೆ ಜಾರಿ ಮಾಡಿದೆ. ನಾಮಪತ್ರ ಸಲ್ಲಿಸುವ ಉಮೇದುವಾರರೊಂದಿಗೆ 4 ಮಂದಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಬರಲು ಅನುಮತಿ ನೀಡಲಾಗಿದೆ. ಒಟ್ಟು 5 ಮಂದಿಗೆ ಮಾತ್ರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಇರಲು ಅವಕಾಶ ಕಲ್ಪಿಸಲಾಗಿದೆ ಎಂದರು.
ನಾಮಪತ್ರಗಳ ಪರಿಶೀಲನೆ ನಂತರ ಏ.20 ರಂದು ನಾಮಪತ್ರ ವಾಪಸ್ಸಾತಿ ಕಾಲಾವಕಾಶ ಮುಗಿದ ನಂತರ ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಮೇ 07 ರಂದು ಮತದಾನ ನಡೆಯಲಿದ್ದು,  ಜೂ.4 ರಂದು ಮತ ಎಣಿಕೆ ನಡೆಯಲಿದೆ. ಜೂ.6 ರಂದು ಚುನಾವಣೆ ಪ್ರಕ್ರಿಯೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.