ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಮತದಾನದ ಕುರಿತು ಜಾಗೃತಿ ಅಭಿಯಾನ

ರಾಯಚೂರು,ಮೇ.೦೯- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯ ವತಿಯಿಂದ ಮೇ.೦೭(ಭಾನುವಾರ) ನಗರದ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾನದಲ್ಲಿ ಪ್ರಯಾಣಿಕರಲ್ಲಿ ಮತದಾನ ಕುರಿತು ಹಾಗೂ ಮೇ.೧೦ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಮೊದಲಿಗೆ ಕೇಂದ್ರ ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಧ್ವನಿವರ್ದಕ ಹಾಗೂ ಕರಪತ್ರಗಳನ್ನು ಹಂಚುವ ಮೂಲಕ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಶಶಿಧರ ಕುರೇರ ಅವರು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ನಂತರ ನಗರದ ರೈಲು ನಿಲ್ದಾಣದಲ್ಲಿ ಅನೌನ್ಸ್‌ಮೆಂಟ್ ಮೂಲಕ ಜನರಿಗೆ ಮತದಾನದ ಮಹತ್ವದ ಕುರಿತು ಹಾಗೂ ಮೇ.೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡಬೇಕು ಮತ್ತು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ನಂತರ ರೈಲು ನಿಲ್ದಾಣಕ್ಕೆ ಬಂದ ಪ್ರಯಾಣಿಕರಿಗೆ ವಿಶೇಷವಾಗಿ ಯುವ ಮತದಾರರಿಗೆ ಕರಪತ್ರವನ್ನು ನೀಡುವ ಮೂಲಕ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ, ತಾಲೂಕು ಪಂಚಾಯತ್ ಇಒ ರಾಮರೆಡ್ಡಿ, ತಾಲೂಕು ಆರೋಗ್ಯ ಅಧಿಕಾರಿ ಶಾಖೀರ್, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.