ಬಾಬಾ ಸಾಹೇಬ್ ಅಂಬೇಡ್ಕರ್ ನೆನೆಯುವುದು ನಮ್ಮೆಲ್ಲರ ಕರ್ತವ್ಯ

ಚಿತ್ರದುರ್ಗ.ಏ.೧೫; ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ. ದೇಶದ ಸುಭದ್ರ ಅಡಿಪಾಯಕ್ಕೆ ಸಂವಿಧಾನ ಕಾರಣವಾಗಿದೆ. ಇಂದಿಗೂ ದೇಶದ ಎಲ್ಲಾ ವಿಚಾರಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಇಂತಹ ಮಹಾನ್ ಸಂವಿಧಾನ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೇಶದ ಪ್ರಜೆಯಾಗಿ ನೆನೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ  ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ವ್ಯಕ್ತಿತ್ವ ಹಾಗೂ ಅವರಿಂದ ಕಲಿಯಬೇಕಾದ ವಿಷಯಗಳು ಹೆಚ್ಚಿವೆ. ಅಂಬೇಡ್ಕರ್ ಅವರ ಓದಿನ ಮೇಲಿನ ಪ್ರೀತಿ ನಮ್ಮೆಲ್ಲರಿಗೂ ಮಾದರಿಯಾಗಿದೆ. ಯುವಕರು ಅಂಬೇಡ್ಕರ್ ಚರಿತ್ರೆ, ಅವರು ನೀಡಿದ ಕೊಡುಗೆಗಳನ್ನು ಓದಿ ತಿಳಿದುಕೊಳ್ಳಬೇಕು. ಇದರಿಂದ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲಿನ ಎಲ್ಲಾ ಪ್ರಜಾಪ್ರಭುತ್ವ  ಸೇರಿದಂತೆ ಎಲ್ಲಾ ರಾಷ್ಟ್ರಗಳ ಸಂವಿಧಾನಗಳನ್ನು ಓದಿ ಭಾರತ ಬೃಹತ್ ಸಂವಿಧಾನ ರಚನೆ ಮಾಡಿದ್ದಾರೆ. ಮುಂದಿನ ಪೀಳಿಗೆ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನ ತಿದ್ದುಪಡಿಗೂ ಅವಕಾಶವನ್ನು ಅಂಬೇಡ್ಕರ್ ಸಂವಿಧಾನದಲ್ಲಿ ಕಲ್ಪಿಸಿದ್ದಾರೆ. ಇದು ಅವರ ದೂರದೃಷ್ಟಿ ತೋರಿಸುತ್ತದೆ ಎಂದರು.