ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 5 ವರ್ಷ ಜೈಲುಶಿಕ್ಷೆ

ಕಲಬುರಗಿ,ಮೇ 5: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಸಾಬೀತಾದ್ದರಿಂದ ಅಪರಾಧಿಗೆ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೋಕ್ಸೋ) ನ್ಯಾಯಾಲಯ 5 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 8500 ರೂ ದಂಡ ವಿಧಿಸಿ ಆದೇಶಿಸಿದೆ.
ಜೇವರಗಿ ತಾಲೂಕಿನ ಗ್ರಾಮವೊಂದರ ಶರಣಪ್ಪ ಅಲಿಯಾಸ್ ಶರಣು ರಾಮು ದೊಡ್ಡಮನಿ ಶಿಕ್ಷೆಗೊಳಗಾದ ವ್ಯಕ್ತಿ.
2023 ರ ಡಿಸೆಂಬರ್ 14 ರಂದು ಈ ವ್ಯಕ್ತಿ ಬಾಲಕಿಯ ಮನೆಯನ್ನು ಅಕ್ರಮವಾಗಿ ಪ್ರವೇಶಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ( ವಿಶೇಷ ಪೋಕ್ಸೋ) ನ್ಯಾಯಾಲಯ-ಎಫ್‍ಟಿಎಸ್‍ಸಿ 1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ತೀರ್ಪು ನೀಡಿದ್ದಾರೆ.ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ ತುಪ್ಪದ ಅವರು ವಾದ ಮಂಡಿಸಿದ್ದರು.