
ಕಲಬುರಗಿ,ಮಾ.08:ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಬುರಗಿ ಜಿಲ್ಲೆ ಹಾಗೂ ಎಲ್ಲಾ ತಾಲೂಕುದಾದ್ಯಂತಹ ಸಂಚರಿಸುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳ ಮೂಲಕ (ಬಸ್ ಬ್ರ್ಯಾಡಿಂಗ್) ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತರಾದ ವೆಂಕಟೇಶ ಶಿಂಧಿಹಟ್ಟಿ ಅವರು ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ನಂ. 1ರಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಅವರು ಮಂಗಳವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು, 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.
ಬಾಲ್ಯಾವಸ್ಥೆ ಹಾಗೂ ಕಿಶೊರಾವಸ್ಥೆ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ರಿಂದ 50,000 ರೂ. ರ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಕಲಬುರಗಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಿಸಲು ಪ್ರಯತ್ನ ಮಾಡಬೇಕೆಂದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಲು ಪೋಷಕರು, ಸಾರ್ವಜನಿಕರು, ಸರ್ಕಾರ ನೇಮಿಸಿದ ವಿವಿಧ 11 ಇಲಾಖೆಯ ನಿರೀಕ್ಷಕರುಗಳು ಕೈಜೋಡಿಸಿದಾಗ ಮಾತ್ರ ಈ ಒಂದು ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ ಎಂದರು.
ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿ ವಿರೇಶ.ಎಚ್.ತ್ಯಾಪಿ, ಮಾತನಾಡಿ, ಇಂತಹ ಅರಿವು ಕಾರ್ಯಕ್ರಮ ಏರ್ಪಡಿಸುವ ಮೂಲಕ ಪರಿಣಾಮಕಾರಿಯಾಗಿ ಕಾಯ್ದೆ ಅನುಷ್ಠಾನಗೊಳಿಸಿ, ಬಾಲಕಾರ್ಮಿಕ ಪದ್ದತಿ ಹೋಗಲಾಡಿಸಲು ಪ್ರಯತ್ನಿಸಬೇಕೆಂದರು.
ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿ ಡಾ. ಅವಿನಾಶ ನಾಯ್ಕ ಮಾತನಾಡಿ, ಮಕ್ಕಳು ರಾಷ್ಟ್ರದ ಸಂಪತ್ತು ಆಗಿದ್ದು, ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಕಳವಳಿಕಾರಿ ವಿಷಯವಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ವಿವಿಧ ಇಲಾಖೆಯ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಮಾಣಿಕ ಪ್ರಯತ್ನ ಮಾಡಬೇಕೆಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳನ್ನು ಹಾಗೂ 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ (ಫ್ಯಾಕ್ಟರಿ, ಮೈನ್ಸ್, ಕೆಮಿಕಲ್ಸ್ ಮತ್ತು ಎಕ್ಸಪ್ಲೋಜಿವ್) ದುಡಿಯುವುದು ಕಂಡು ಬಂದಲ್ಲಿ ಚೈಲ್ಡ್ ಲೈನ್ -1098/112 ಅಥವಾ 080-22453549, 08472-256295, 269347, 275278 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ರಮೇಶ ಸುಬಂಡ್, ಡಿಪೋ ವ್ಯವಸ್ಥಾಪಕ ಅಶೋಕ ದೊಡ್ಡಮನಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ರವೀಂದ್ರಕುಮಾರ ಬಲ್ಲೂರ್, ಕೆ.ಎಸ್. ಪ್ರಸನ್ನ, ಪರಶುರಾಮ, ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಕವಿತಾ, ಶಿವರಾಜ ಪಾಟೀಲ್ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.