ಬಾಲ್ಯ ವಿವಾಹ ತಡೆಗೆ ಸಹಕರಿಸಿ-ಡಿಸಿ

ಕೋಲಾರ, ಡಿ.೯: ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ, ತಮ್ಮ ಸುತ್ತ ಬಾಲ್ಯ ವಿವಾಹ ಕಂಡುಬಂದರೆ ತಕ್ಷಣ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿ ಬಾಲ್ಯ ವಿವಾಹ ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ||ಆರ್.ಸೆಲ್ವಮಣಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ಸಭೆಗಳನ್ನು ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ. ಬಾಲ್ಯ ವಿವಾಹ ನಡೆಯುವುದು ಅಕ್ಕ ಪಕ್ಕ ಮನೆಯವರಿಗೆ ತಿಳಿದಿರುತ್ತದೆ ಆದರೆ ಮಾಹಿತಿ ನೀಡಲು ಮುಂದೆ ಬರುತ್ತಿಲ್ಲ ಎಂದು ಅವರು ತಿಳಿಸಿದರು.
ಅಪೌಷ್ಠಿಕ ಮಕ್ಕಳ ತಾಯಂದಿರನ್ನು ಎನ್.ಆರ್.ಸಿ ಕೇಂದ್ರಗಳಿಗೆ ದಾಖಲಾಯಿಸಿ ಪೌಷ್ಠಿಕ ಆಹಾರ ಮತ್ತು ಸೂಕ್ತ ಚಿಕಿತ್ಸೆ ನೀಡಿ, ಎನ್.ಆರ್.ಸಿ ಕೇಂದ್ರಗಳಲ್ಲಿ ದಾಖಲಾಗುವ ತಾಯಂದಿರಿಗೆ ನರೇಗಾ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಜಿ. ಪಾಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಏಪ್ರಿಲ್ ೨೦೨೧ ರಿಂದ ಇದೂವರೆಗೆ ೬೨ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ೮ ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೩೫೪೨ ಅಪೌಷ್ಠಿಕ ಮಕ್ಕಳಿದ್ದಾರೆ. ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಜೀವಂತ ಹೆರಿಗೆಗೆ ೩ ಕಂತುಗಳಲ್ಲಿ ೫,೦೦೦ ಹೆರಿಗೆ ಭತ್ಯೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ೫೨,೦೨೬ ವಿಧವೆಯರು ನೊಂದಣಿಯಾಗಿದ್ದು ಅವರಿಗೆ ಮಾಸಾಶನ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿಗಳಾದ ಸಿ.ಹೆಚ್. ಗಂಗಾಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.