ಕಲಬುರಗಿ,ಜೂ.12:ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬೆಳವಣಿಗೆಗೆ ಮಾರಕವಾಗಿದ್ದು, ಅದರ ನಿರ್ಮೂಲನೆಗೆ ಸಂವಿಧಾನ, ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೊಳಿಸಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ನಿರ್ಮೂಲನೆ ಮಾಡಲು ಅಧಿಕಾರಿಗಳ ಇಚ್ಛಾಶಕ್ತಿ ಹಾಗೂ ಪಾಲಕ-ಪೋಷಕ, ಉದ್ಯೋಗದಾತರ ಸೇರಿದಂತೆ ಎಲ್ಲರ ಸಹಕಾರದಿಂದ ಮಾತ್ರ ಸಾಧ್ಯವಿದೆ ಎಂದು ಜಿಲ್ಲಾ ನಿವೃತ್ತ ಕಾರ್ಮಿಕ ಅಧಿಕಾರಿ ಜಿ.ಸಿದ್ಧಲಿಂಗಪ್ಪ ಅಭಿಮತ ವ್ಯಕ್ತಪಡಿಸಿದರು.
ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ‘ಕೊಹಿನೂರ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಜರುಗಿದ’ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಬಳಗದ ಅಧ್ಯಕ್ಷ, ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯ ಪೂರ್ವದಿಂದಲೇ ರಚಿಸಲಾಗಿದೆ. ನಂತರ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿ ಬಾಲ ಕಾರ್ಮಿಕತೆಯ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ. ಶಿಕ್ಷಣ ದೊರೆತರೆ ಹಾಗೂ ಬಡತನ ನಿರ್ಮೂಲನೆಯಾದರೆ ಬಾಲ ಕಾರ್ಮಿಕತೆ ನಿರ್ಮೂಲನೆಯಾಗುತ್ತ ಎಂಬ ಸಂಗತಿಯಿಂದ ಸರ್ಕಾರಗಳು ಅನೇಕ ಸೌಕರ್ಯಗಳನ್ನು ನೀಡುತ್ತಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಪಾಲಕ-ಪೋಷಕ ವರ್ಗದವರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೆ, ಶಿಕ್ಷಣ ನೀಡಿ ಸದೃಢ ಮಾನವ ಸಂಪನ್ಮೂಲವನ್ನಾಗಿಸಬೇಕು ಎಂದರು.
ಬಾಲ ಕಾರ್ಮಿಕತೆಯಿಂದಾಗುವ ದುಷ್ಪರಿಣಾಮಗಳನ್ನು ಬಾಲ ಕಾರ್ಮಿಕರು, ಪಾಲಕ-ಪೋಷಕ, ಸಮುದಾಯಕ್ಕೆ ಮನವರಿಕೆ ಮಾಡಿಕೊಟ್ಟು, ಅವರಲ್ಲಿ ಮಾನಸಿಕ ಧೈರ್ಯವನ್ನು ತುಂಬಬೇಕು. ಅಂತಹ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಯೋಜನೆ,ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿ ನಾಶಪಡಿಸಬಹುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಎಸ್.ಘತ್ತರಗಿ, ಉಪನ್ಯಾಸಕರಾದ ಅಶ್ವಿನಿ ಪಾಟೀಲ, ಅರ್ಚನಾ ಹೀರಾಪುರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಮೃತ ಸಿ.ಪಾಟೀಲ ಸಿರನೂರ್, ಪ್ರಮುಖರಾದ ಶೈಲಜಾ ಜಿ., ಭಾಗ್ಯರ್ಶರೀ ಎನಾಗೂರ, ಐಶ್ವರ್ಯ ಗೌಡಪ್ಪಗೋಳ್, ಅಂಬಿಕಾ ಶೀಗರಕಂಟಿ, ವಿನುತಾ ಹಿರೇಮಠ, ಗುರುಶಾಂತಪ್ಪ ಗೌಡಪ್ಪಗೋಳ್, ಭೂಮಿಕಾ ಯಳಸಂಗಿ, ನಿಸರ್ಗಾ ಜವಳಿ, ಮಲ್ಲಿಕಾರ್ಜುನ ಬಿರಾದಾರ, ಉರ್ಮಿಳಾ ಗಾಯಕವಾಡ, ಅಂಬಿಕಾ ಪೂಜಾರಿ ಸೇರಿದಂತೆ ಹಲವರಿದ್ದರು.