ಬಾಲ ವಿಕಾಸ ಸಮಿತಿಗಳನ್ನು ಕ್ರಿಯಾಶೀಲಗೊಳಿಸಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.04- ಜಿಲ್ಲೆಯಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಲ ವಿಕಾಸ ಸಮಿತಿಗಳನ್ನು ಕ್ರಿಯಾಶೀಲಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರ ಸಮ್ಮುಖದಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಡೆದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಪ್ರಗತಿಗಾಗಿ ಸರ್ಕಾರ ಹಲವು ಯೋಜನೆಗಳು ಹಾಗೂ ಸಮಿತಿಗಳನ್ನು ರೂಪಿಸಿ ಜಾರಿಗೊಳಿಸಿದೆ. ಪಿ.ಎಂ. ಕೇರ್ ಫಾರ್ ಚಿಲ್ಡ್ರನ್ ಯೋಜನೆ, ಬೀದಿ ಬದಿ ಮಕ್ಕಳ ಪುನರ್ವಸತಿ ಯೋಜನೆ, ಮಕ್ಕಳ ವಿಶೇಷ ಪಾಲನಾ ಯೋಜನೆ, ಕೇಂದ್ರ ಪುರಸ್ಕøತ ಪ್ರಾಯೋಜಕತ್ವ ಕಾರ್ಯಕ್ರಮಗಳು, ಮಕ್ಕಳ ದತ್ತು ಯೋಜನೆ, ವಾತ್ಸಲ್ಯ ಸದನ ಕಟ್ಟಡ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ತ್ವರಿತವಾಗಿ ಮಕ್ಕಳನ್ನು ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ನಡೆಸಬೇಕು. ಮಕ್ಕಳ ಸಮಸ್ಯೆಗಳನ್ನು ಅರಿಯಲು ಗ್ರಾಮಸಭೆಗಳು ಉತ್ತಮ ವೇದಿಕೆಯಾಗಲಿವೆ. ಪಂಚಾಯಿತಿ ಸದಸ್ಯರು ಹಾಗೂ ಆಯಾ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಸಮನ್ವಯ ಸಾಧಿಸಿ ಬಾಲ ವಿಕಾಸ ಸಮಿತಿಗಳು ಕಾರ್ಯನಿರ್ವಹಿಸುವಂತೆ ನಿಗಾ ವಹಿಸಬೇಕು. ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಮಕ್ಕಳ ಬೌದ್ಧಿಕ ವಿಕಾಸಕ್ಕೆ ಅನುಕೂಲವಾಗುವಂತೆ ಎಲ್ಲಾ ಶಾಲೆ, ಅಂಗನವಾಡಿಗಳಲ್ಲಿ ಗ್ರಂಥಾಲಯಗಳಿರಬೇಕು. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿರಬೇಕು. ಶಿಥಿಲವಾಗಿರುವ ಶಾಲಾ-ಅಂಗನವಾಡಿ ಕಟ್ಟಡಗಳನ್ನು ನವೀಕರಿಸಬೇಕು. ಉಡುಪಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿಯಮಾವಳಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಚಾಮರಾಜನಗರಕ್ಕೂ ಇದನ್ನೇ ಮಾದರಿಯಾಗಿಸಿಕೊಂಡು ಮಕ್ಕಳ ಕ್ಷೇತ್ರದಲ್ಲಿ ಜಿಲ್ಲೆಯ ಪ್ರಗತಿಗೆ ಎಲ್ಲಾ ಇಲಾಖೆಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಅಧಿಕಾರಿಗಳು ಆಗಿಂದಾಗ್ಗೆ ಹಾಸ್ಟಲ್‍ಗಳಿಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲಿಸಬೇಕು. ಹಾಸ್ಟಲ್‍ಗಳಲ್ಲಿ ಮಕ್ಕಳ ಸಹಾಯವಾಣಿ ಹಾಗೂ ಸಲಹಾ ಪಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಈ ಸಂಬಂಧ ಸೆಪ್ಟೆಂಬರ್ 14ರಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮಿಷನ್ ವಾತ್ಸಲ್ಯ ಯೋಜನೆಯಡಿ ವಾತ್ಸಲ್ಯ ಸದನ ಕಟ್ಟಡ ನಿರ್ಮಾಣಕ್ಕಾಗಿ ತಾಲೂಕಿನ ರಾಮಸಮುದ್ರದ ಸರ್ವೇ ನಂಬರ್ 116ರಲ್ಲಿ ಹಾಗೂ ಯಡಪುರ ಗ್ರಾಮದ ಸರ್ವೇ ನಂಬರ್ 124ರಲ್ಲಿ ತಲಾ 4 ಎಕರೆ ಜಮೀನು ಮಂಜೂರಾಗಿದ್ದು, ನಿವೇಶನಕ್ಕೆ ಸಂಬಂಧಿಸಿದ ಅಂದಾಜುಪಟ್ಟಿ ಹಾಗೂ ನೀಲಿನಕ್ಷೆಯನ್ನು ವಾರದೊಳಗೆ ಸಿದ್ದಪಡಿಸಿ ಸಲ್ಲಿಸುವಂತೆ ತಹಶೀಲ್ದಾರ್‍ರವರಿಗೆ ದೂರವಾಣಿ ಮೂಲಕ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸೂಚಿಸಿದರು.
ಇದೇ ವೇಳೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಸಭೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳ ಸಮಸ್ಯೆಗಳ ನಿವಾರಣೆಗಾಗಿ ಆಗಬೇಕಾಗಿರುವ ಕಾರ್ಯಕ್ರಮಗಳ ಕುರಿತು ಸವಿವರ ಮಾಹಿತಿಯನ್ನು ಸಭೆಯಲ್ಲಿ ಮಂಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಸಾಂಸ್ಥಿಕ ಮಕ್ಕಳ ರಕ್ಷಣಾಧಿಕಾರಿ ಶ್ರೀನಾಗು, ಜಿಲ್ಲಾ ಸಂಯೋಜಕರಾದ ಸಿದ್ದಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಜಯಮ್ಮ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಹರದನಹಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕರ ವಸತಿ ನಿಲಯ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ, ಮಕ್ಕಳಿಂದ ಅಹವಾಲು ಆಲಿಸಿದರು. ನಂತರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರೊಂದಿಗೆ ಮಕ್ಕಳ ಕಾನೂನುಗಳ ಬಗ್ಗೆ ಚರ್ಚಿಸಿದರು.