ಬಿಎಸ್‌ವೈ ಭ್ರಷ್ಟಾಚಾರ ಪ್ರಕರಣ ಮರುವಿಚಾರಣೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ. ೭- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಕುರಿತಂತೆ ಮರುವಿಚಾರಣೆಗೆ ಹೈಕೋರ್ಟ್ ಆದೇಶಿಸಿದೆ.ಪ್ರಾಸಿಕ್ಯೂಸಿನ್ ಪೂರ್ವಾನುಮತಿ ಸಿಗದ ಹಿನ್ನೆಲೆಯಲ್ಲಿ ಈ ಪ್ರಕರಣ ವಜಾಗೊಂಡಿತ್ತು. ಈಗ ಹೈಕೋರ್ಟ್ ವಿಚಾರಣಾ ಕೋರ್ಟ್ ವಜಾ ಆದೇಶ ರದ್ದುಪಡಿಸಿದ್ದು ಪ್ರಕರಣ ಮರು ವಿಚಾರಣೆಗೆ ನಿರ್ದೇಶನ ನೀಡಿದೆ.
ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಶಶಿಧರ ಮರಡಿ, ಸಂಜಯ್‌ಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಡಾ. ಜಿ.ಸಿ. ಪ್ರಕಾಶ್, ಕೆ.ವಿ. ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.ಅಮಿಕಸ್ ಕ್ಯೂರಿಯಾಗಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದ್ದರು. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್‌ಗೆ ಯಡಿಯೂರಪ್ಪ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ. ಕಾಲಾವಕಾಶದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಮಾನಿಸಲಿ ಎಂದು ಹೈಕೋರ್ಟ್‌ಗೆ ಪ್ರತಿಕ್ರಿಯಿಸಲಿದೆ.
ಟಿ.ಜೆ. ಅಬ್ರಹಾಂ ಅವರು ಇತ್ತೇಚೆಗೆ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಇಲ್ಲವೇ ಎಸ್‌ಐಟಿಗೆ ವಹಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈಗ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.
ಇದೇ ವೇಳೆ ಅರ್ಜಿಯನ್ನು ಮಾರ್ಪಡಿಸಿ, ಸಂಬಂಧ ಪಟ್ಟ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಪ್ರಾಸಿಕ್ಯೂಸಿನ್‌ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.