ಬಿಎಸ್ ವೈ ಆಸ್ಪತ್ರೆಗೆ ದಾಖಲು

ಬೆಂಗಳೂರು,ಏ.೧೬- ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವರು.
ಎರಡು ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಜ್ವರದಿಂದ ಬಳಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಆರೋಗ್ಯ ತಪಾಸಣೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದರು.
ಕೊರೊನಾ ನಿಯಂತ್ರಣ ಸಂಬಂಧ ಉನ್ನತಾಧಿಕಾರಿಗಳ ಸಭೆ ನಡೆಸಿದ ನಂತರ ಅವರು ನೇರವಾಗಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ತೆರಳಿ ಅಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವರು.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಜ್ವರ ಕಾಣಿಸಿಕೊಂಡಿತ್ತು. ಮಾತ್ರೆ ಸೇವಿಸಿ ಪ್ರಚಾರದಲ್ಲಿ ಪಾಲ್ಗೊಂಡು ನಿನ್ನೆ ನಗರಕ್ಕೆ ವಾಪಸ್ಸಾಗಿದ್ದರು. ಇಂದು ಅವರು ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದು, ವೈದ್ಯರು ಸಂಪೂರ್ಣ ಆರೋಗ್ಯ ತಪಾಸಣೆಗಾಗಿ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯುವಂತೆ ಸೂಚಿಸಿದ್ದು, ಅದರಂತೆ ಮುಖ್ಯಮಂತ್ರಿಗಳು ಎರಡು ದಿನ ಆಸ್ಪತ್ರೆಯಲ್ಲಿ ಇರುವರು.