ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಸಿಎಂ ಕರೆ

ತುಮಕೂರು, ನ. ೨೭- ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್‌ಗೌಡ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದಲ್ಲಿ ರಾತ್ರಿ ನಡೆದ ಭಾರತೀಯ ಜನತಾ ಪಾರ್ಟಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ಪಕ್ಷಕ್ಕೆ ಬಹಳ ಮಹತ್ವವಾದ ಚುನಾವಣೆಯಾಗಿದೆ. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.
ತುಮಕೂರಿಗೂ ನನಗೂ ಅವಿನಾಭಾವ ಸಂಬಂಧ ಇದೆ ಎಂದ ಅವರು ಈ ಹಿಂದೆ ತಾವು ನೀರಾವರಿ ಸಚಿವರಾಗಿದ್ದಾಗ ಜಿಲ್ಲೆಯ ನೀರಾವರಿ ಯೋಜನೆಗೆ ಒತ್ತು ನೀಡಿದ್ದನ್ನು ಸ್ಮರಿಸಿ,
ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಮನ್ವಯತೆಯಿಂದ ಕೆಲಸ ಮಾಡಿದರೆ ನಮ್ಮ ಗೆಲುವು ಖಚಿತ ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಎನ್. ಲೋಕೇಶ್‌ಗೌಡ, ಸಚಿವರಾದ ಬಿ.ಸಿ. ನಾಗೇಶ್, ಬೈರತಿ ಬಸವರಾಜ್, ಸಂಸದ ಜಿ.ಎಸ್. ಬಸವರಾಜ್ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಡಾ.ಸಿ.ಎಂ.ರಾಜೇಶ್‌ಗೌಡ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ರವಿಕುಮಾರ್, ವೈ.ಎ. ನಾರಾಯಣಸ್ವಾಮಿ, ಮಾಜಿ ಸಚಿವ ಸೊಗಡು ಎಸ್.ಶಿವಣ್ಣ, ಮಾಜಿ ಶಾಸಕ ಬಿ. ಸುರೇಶ್ ಗೌಡ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾಗವಹಿಸಿದ್ದರು.