ಬಿಜೆಪಿ ಅವಕಾಶವಾದಿ ರಾಜಕಾರಣಕ್ಕಾಗಿ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಮುಂದೂಡಿಕೆ: ಡಾ. ಪಾಟೀಲ್ ಆರೋಪ

ಕಲಬುರಗಿ:ನ.17:ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬರುವ ಉದ್ದೇಶದಿಂದ ನವೆಂಬರ್ 20ರಂದು ನಿಗದಿಯಾಗಿದ್ದ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯನ್ನು ಮುಂದೂಡಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಡಾ. ಶರಣಪ್ರಕಾಶ್ ಪಾಟೀಲ್ ಅವರು ಆರೋಪಿಸಿದರು.
ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಪ್ರಾದೇಶಿಕ ಆಯುಕ್ತರು ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದರು.
ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿತ್ತು. ಆದಾಗ್ಯೂ, ಯಾವುದೇ ಸಕಾರಣವಿಲ್ಲದೇ ಚುನಾವಣೆ ಮುಂದೂಡಲಾಗಿದೆ. ಚುನಾವಣೆ ಮುಂದೂಡುವಂತೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಹಾಗಾಗಿ ಪ್ರಾದೇಶಿಕ ಆಯುಕ್ತರು ಯಾವ ಕಾರಣಕ್ಕೆ ಚುನಾವಣೆ ಮುಂದೂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಐಎಎಸ್ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಅದನ್ನು ಬಿಟ್ಟು ಮುಖ್ಯಮಂತ್ರಿ ಹಾಗೂ ಸಚಿವರ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸಬಾರದು ಎಂದು ಅವರು ಒತ್ತಾಯಿಸಿದರು.
ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತನಗೆ ಅಧಿಕಾರ ಸಿಗುವುದಿಲ್ಲವೆಂದು ಭಾವಿಸಿ ಬಿಜೆಪಿಯು ತನ್ನ ಪಕ್ಷದ ಏಳು ಜನ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರಿಸುವ ಹುನ್ನಾರ ಮಾಡುತ್ತಿದೆ. ಇಂತಹ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಇನ್ನು ಬಿಜೆಪಿಗೆ ಅಧಿಕಾರ ಸಿಗುವುದಿಲ್ಲ ಎಂದು ಮನಗಂಡು ಮೇಯರ್ ಹಾಗೂ ಉಪಮೇಯರ್ ಚುನಾವಣೆಯನ್ನು ಮುಂದೂಡಿದ್ದು ನಾಚಿಕೆಗೇಡಿತನದ್ದು ಎಂದು ಅವರು ಕಟುವಾಗಿ ಟೀಕಿಸಿದರು.
ಮತದಾರರ ಪಟ್ಟಿಯಲ್ಲಿ ಏಳು ಜನ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಹೆಸರು ಸೇರ್ಪಡೆಯನ್ನು ವಿರೋಧಿಸಿ ಈಗಾಗಲೇ ಸ್ಥಳೀಯ ಉಚ್ಛ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ವಿಧಾನ ಪರಿಷತ್ ಚುನಾವಣೆ ನೆಪ ಮಾಡಿಕೊಂಡು ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರವಾಗಿದೆ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕೂಡಲೇ ಪ್ರಾದೇಶಿಕ ಆಯುಕ್ತರು ಚುನಾವಣೆ ಮುಂದೂಡಿಕೆಯ ಆದೇಶವನ್ನು ಹಿಂಪಡೆದು, ಈಗಾಗಲೇ ನಿಗದಿಯಾದಂತೆ ನವೆಂಬರ್ 20ರಂದು ಚುನಾವಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ, ಮಾಜಿ ಮೇಯರ್ ಶರಣಕುಮಾರ್ ಮೋದಿ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ ಮುಂತಾದವರು ಉಪಸ್ಥಿತರಿದ್ದರು.