ಬಿಜೆಪಿ ಆತ್ಮಾವಲೋಕನ ಸಭೆ

ಬೆಂಗಳೂರು,ಮೇ೨೧:ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ಇಂದು ಆತ್ಮಾವಲೋಕನ ಸಭೆ ನಡೆಸಲಿದೆ. ಬಿಜೆಪಿಯ ಕಚೇರಿಯಲ್ಲಿ ಇಂದು ಸಂಜೆ ಎಲ್ಲ ಜಿಲ್ಲಾಧ್ಯಕ್ಷರುಗಳು, ವಿಭಾಗೀಯ ಪ್ರಭಾರಿಗಳ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಚುನಾವಣಾ ಸೋಲಿಗೆ ಕಾರಣಗಳ ಬಗ್ಗೆ ಚರ್ಚೆಗಳು ನಡೆಯಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿದಂತೆ ಪ್ರಮುಖ ಮುಖಂಡರುಗಳು ಸಭೆಯಲ್ಲಿ ಪಾಲ್ಗೊಳ್ಳುವರು.
ಈ ಸಭೆಯ ನಂತರ ಬಿಜೆಪಿ ಪ್ರಮುಖ ಮುಖಂಡರ ಸಭೆಯೂ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆಗಳು ನಡೆಯಲಿದ್ದು, ವರಿಷ್ಠರ ಜತೆ ಚರ್ಚಿಸಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತದೆ.