ಬಿಜೆಪಿ ಎಸ್ಸಿ – ಎಸ್ಟಿ ಮೋರ್ಚಾದಿಂದ ಪ್ರತಿಭಟನೆ

 ಸಂಜೆವಾಣಿ ವಾರ್ತೆ

ಶಿವಮೊಗ್ಗ, ಫೆ. 29; ಎಸ್ಸಿ – ಎಸ್ಟಿ ಸಮುದಾಯಕ್ಕೆ ಮೀಸಲಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ, ಬಿಜೆಪಿ ಎಸ್ಸಿ – ಎಸ್ಟಿ ಮೋರ್ಚಾ ಸಂಘಟನೆಯು ಶುಕ್ರವಾರ ಶಿವಮೊಗ್ಗ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.ಗೋಪಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿಸಿ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಿದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳ ಸರ್ವಾಂಗೀಣ ಅಭಿವೃದ್ದಿಗೆ ಮೀಸಲಾಗಿದ್ದ 11,500 ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ಈ ಮೂಲಕ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.