ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಕೆ.ಆರ್.ಪುರ, ಮೇ.೫-ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಮಹದೇವಪುರ ಕ್ಷೇತ್ರದ ಕಾಡುಗೋಡಿ ಬಾಪೂಜಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮಾಡಿದರು.
ಮೌನ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಹದೇವಪುರ ಕ್ಷೇತ್ರದ ಗ್ರಾಮಾಂತರ ಅಧ್ಯಕ್ಷ ನಟರಾಜ್ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಎಂದು ತಿಳಿಸಿದರು.
ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿರುವುದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು,ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಹಲವಾರು ಮಂದಿ ಜೀವತೆತ್ತಿದ್ದು ಇದು ಬೇಸರ ತಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ವಿ.ಪ್ರಶಾಂತ್ ರೆಡ್ಡಿ ಅವರು ಸ್ಥಳೀಯ ಸರ್ಕಾರ ಬಿಜೆಪಿ ಕಾರ್ಯಕರ್ತರ ರಕ್ಷಣೆ ಒತ್ತು ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಯುವಮೋರ್ಚಾ ವತಿಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಮೌನ ಪ್ರತಿಭಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಭಿತ್ತಿ ಫಲಕಗಳನ್ನು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.