ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ: ಸಿಐಡಿ ಇಲ್ಲವೇ ಸಿಬಿಐ ತನಿಖೆಗೆ ಕೇಂದ್ರ ಸಚಿವ ಖೂಬಾ ಆಗ್ರಹ

ಕಲಬುರಗಿ,ಅ.19: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಅವರ ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಕುರಿತು ಮೂರು ವಿಡಿಯೋಗಳನ್ನು ಬಿಡುಗಡೆ ಮಾಡಿ ಆತ್ಮಹತ್ಯೆಗೆ ಕಾರಣದ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಸದರಿ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ಇಲ್ಲವೇ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲಗಳು, ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕೂಡಲೇ ಪ್ರಕರಣವನ್ನು ಸಿಐಡಿಗೆ ಒಪ್ಪಿಸಬೇಕು ಹಾಗೂ ಸರ್ಕಾರದ ವತಿಯೀಂದ ಸೂಕ್ತ ಪರಿಹಾರ ನೀಡಬೇಕು. ಇಲ್ಲದೇ ಹೋದಲ್ಲಿ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ತನ್ನ ಸಾವಿಗೆ ಡಾ. ಶರಣಪ್ರಕಾಶ್ ಪಾಟೀಲ್ ಅವರೇ ನೇರ ಕಾರಣ ಎಂದು ಶಿವಕುಮಾರ್ ಅವರು ಆರೋಪ ಮಾಡಿದ್ದಾರೆ. ಅಲ್ಲದೇ ಹಿಂದೂ ಧರ್ಮದ ಕುರಿತು ಮಾತನಾಡಿದರೆ ಅವರಿಗೆ ಬೆಂಕಿ ಬೀಳುತ್ತೇ ಎಂದೂ ಆಡಿಯೋದಲ್ಲಿ ಹೇಳಿದ್ದಾರೆ ಎಂದು ಹೇಳಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರಿಗೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಜನ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಆಡಿಯೋಗಳ ಹಿನ್ನೆಲೆಯಲ್ಲಿ ಕೂಡಲೇ ಡಾ. ಶರಣಪ್ರಕಾಶ್ ಪಾಟೀಲ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲದೇ ಹೋದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಅವರನ್ನು ಸಂಪುಟದಿಂದ ವಜಾಗೊಳಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಹಾಗೂ ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದಾವುದರ ಕುರಿತು ಮಾತನಾಡುತ್ತಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಚಿವರ ದಬ್ಬಾಳಿಕೆಯಿಂದ ಆತ್ಮಹತ್ಯೆ ಆಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಕಾಟ ಕೊಟ್ಟ ಕೊಲೆಗಡುಕರನ್ನು ಬಂಧಿಸಬೇಕು ಎಂದು ಖೂಬಾ ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸದ ಡಾ. ಉಮೇಶ್ ಜಾಧವ್, ರಾಜ್ಯ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಾಧ್ಯಮ ವಕ್ತಾರ ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ, ಅಂಬಾರಾಯ್ ಚಲಗೇರಾ ಮುಂತಾದವರು ಉಪಸ್ಥಿತರಿದ್ದರು.