ಬಿಜೆಪಿ, ಜೆಡಿಎಸ್ ಮೈತ್ರಿಗೆ ಗ್ರಹಣ

ಬೆಂಗಳೂರು, ಜು. ೨೧- ಬಿಜೆಪಿ ಜತೆಗಿನ ಮೈತ್ರಿಗೆ ಬಹುತೇಕ ಜೆಡಿಎಸ್ ಶಾಸಕರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿಯಿಂದ ಸದ್ಯಕ್ಕೆ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಉಪಸ್ಥಿತಿಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಶಾಸಕರುಗಳು ಬಿಜೆಪಿ ಜತೆಗಿನ ಮೈತ್ರಿಗೆ ಸಹಮತ ವ್ಯಕ್ತಪಡಿಸದ ಕಾರಣ ಯಾವುದೇ ಮೈತ್ರಿ ಮಾಡಿಕೊಳ್ಳದಿರುವ ನಿರ್ಧಾರಕ್ಕೆ ಜೆಡಿಎಸ್ ನಾಯಕರು ಬಂದಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದು, ಈ ಸಂಬಂಧ ನಿನ್ನೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಸಿದ್ದು, ಬಹುತೇಕ ಶಾಸಕರು ಮೈತ್ರಿ ಬೇಡ, ಬಿಜೆಪಿ ಜತೆ ಮೈತ್ರಿಯಾದರೆ ಕೆಲವೊಂದು ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಜತೆಗೆ ಸ್ಥಳೀಯವಾಗಿ ಪಕ್ಷ ಸಂಘಟನೆಗೆ ಕಷ್ಟವಾಗುತ್ತದೆ. ಕಾರ್ಯಕರ್ತರಲ್ಲೂ ಗೊಂದಲ ಸೃಷ್ಠಿಯಾಗುತ್ತದೆ. ಮೈತ್ರಿ ವಿಚಾರವಾಗಿ ಆತುರದ ನಿರ್ಧಾರ ಬೇಡ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಮಾಡಿಕೊಂಡೆವು. ಅದರಿಂದ ಪಕ್ಷಕ್ಕೆ ಲಾಭವಾಗಲಿಲ್ಲ. ಕೇವಲ ಒಂದು ಲೋಕಸಭಾ ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಹಾಗಾಗಿ ಯಾವುದೇ ಪಕ್ಷದ ಜತೆ ಮೈತ್ರಿ ಬೇಡ. ಸ್ವತಂತ್ರವಾಗಿಯೇ ಚುನಾವಣೆ ಎದುರಿಸೋಣ ಎಂದು ಕೆಲ ಶಾಸಕರು ಸಭೆಯಲ್ಲಿ ಹೇಳಿದ್ದು, ಇದಕ್ಕೆ ವರಿಷ್ಠರು ಸಮ್ಮತಿಸಿದರು ಎಂದು ಹೇಳಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ
ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ಮಾಜಿ ಪ್ರಧಾನಿ ದೇವೇಗೌಡರು ಶಾಸಕರ ಮಾತಿನಂತೆ ನಡೆದುಕೊಳ್ಳಲು ನಿರ್ಧರಿಸಿದ್ದು, ಜೆಡಿಎಸ್ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲ್ಲ. ಎನ್‌ಡಿಎಗೂ ಸೇರಲ್ಲ, ಯುಪಿಎಗೂ ಸೇರಲ್ಲ. ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸ್ಥಳೀಯವಾಗಿ ಪಕ್ಷವನ್ನು ಬಲಪಡಿಸಲು ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇವೆ. ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.