ಬಿಜೆಪಿ-ಜೆಡಿಎಸ್ ಮೈತ್ರಿ ಬೊಮ್ಮಾಯಿ ಸಮರ್ಥನೆ

ಹುಬ್ಬಳ್ಳಿ,ಸೆ.೧೧: ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಕುರಿತು ಕಾಂಗ್ರೆಸ್ ನಾಯಕರು ತೀವ್ರವಾಗಿ ಟೀಕಿಸುತ್ತಿರುವ ಬೆನ್ನಲ್ಲೇ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕಾರಣ ನಿಂತ ನಿರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ. ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಎನ್ನುವುದನ್ನು ವಸ್ತುಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಹಿಂದೆ ಕಾಂಗ್ರೆಸ್‌ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ ಆಗ ಇಬ್ಬರೂ ಅಸಹಾಯಕರಿದ್ದರೆ ಎಂದು ಪ್ರಶ್ನಿಸಿದರು.ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದ್ದು, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ಹೋರಾಟ ಮಾಡುತ್ತಿದ್ದೇವೆ ಎಂದರು.ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳ ಅಡ್ಡಿ ವಿಚಾರವಾಗಿ ಪ್ರತಿಕ್ರಿಯಿಸಿ, ಇದೆಲ್ಲವೂ ಕುಂಟು ನೆಪ. ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ಕೊಟ್ಟೆವು. ಆಗ ನಾವು ನಿಯಮ ಬದಲಾವಣೆಗಾಗಿ ಕಾದುಕೊಂಡು ಕುಳಿತಿದ್ದಿಲ್ಲ, ಆಗ ನಾವು ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ನ್ಯಾಷನಲ್ ಡಿಸಾಸ್ಟರ್ ನ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡುವ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದರು.ಖಾಸಗಿ ಬಸ್ಸುಗಳ ಮುಷ್ಕರ ವಿಚಾರವಾಗಿ ಮಾತನಾಡಿ, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದರು. ಸುಮ್ಮನೆ ಸಭೆ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದರು.ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ವಿಚಾರವಾಗಿ ಪ್ರತಿಕ್ರಿಯಿಸಿ ಈ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.