ಬಿಜೆಪಿ ನಾಯಕರು ಕಾಂಗ್ರೆಸ್ ಇತಿಹಾಸ ಓದಲಿ: ಪರಮೇಶ್ವರ್

ತುಮಕೂರು, ನ. ೨೨- ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನ ಮಾಡುವ ಭಾರತೀಯ ಜನತಾ ಪಾರ್ಟಿಯ ನಾಯಕರಿಗೆ ಕಾಂಗ್ರೆಸ್ ಪಕ್ಷದ ಇತಿಹಾಸ ಗೊತ್ತಿಲ್ಲ. ಹಾಗಾಗಿ ಈ ನಾಯಕರುಗಳು ಕಾಂಗ್ರೆಸ್ ಪಕ್ಷದ ಚರಿತ್ರೆ, ಇತಿಹಾಸ ಅಧ್ಯಯನ ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ದೇಶದಲ್ಲಿ ೨೦೦ ವರ್ಷಗಳ ಕಾಲ ಆಡಳಿತ ನಡೆಸಿದ ಬ್ರಿಟೀಷರನ್ನು ಓಡಿಸುವ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ನಮ್ಮದು. ಸ್ವಾತಂತ್ರ್ಯ ಹೋರಾಟ ನಡೆಯುವಾಗ ಬಿಜೆಪಿ ಪಕ್ಷ ಎಲ್ಲಿತ್ತು ಎಂದು ಅವರು ಪ್ರಶ್ನಿಸಿದರು.
ನಗರದ ಗಾಜಿನಮನೆಯಲ್ಲಿ ಕೆಪಿಸಿಸಿ ವತಿಯಿಂದ ಏರ್ಪಡಿಸಿದ್ದ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಅಂಬೇಡ್ಕರ್ ಸಂವಿಧಾನದ ವಿಧಿ ವಿಧಾನಗಳನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದೆ. ದೇಶವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿರುವ ಬಿಜೆಪಿ ಕೋಮುವಾದಿ ಪಕ್ಷ ಎಂದು ಛೇಡಿಸಿದರು.
ದೇಶದಲ್ಲಿ ೫೪ ವರ್ಷ ನಿರಂತರವಾಗಿ ಆಡಳಿತ ನಡೆಸಿದ್ದೇವೆ. ಬಲಿಷ್ಟ, ಭವ್ಯ ಭಾರತ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಹಸಿರುಕ್ರಾಂತಿ ಮಾಡಿದ್ದು ನಮ್ಮ ಪಕ್ಷವೇ. ಇದನ್ನು ಮೊದಲು ಅರಿತು ಬಿಜೆಪಿಗರು ಮಾತನಾಡಲಿ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ವಿದೇಶಕ್ಕೆ ಹೋಗಿ ಭಾರತದಲ್ಲಿ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಈ ಸಾಧನೆಗೆ ಅಡಿಪಾಯ ಹಾಕಿದ್ದು ಯಾರು ಎಂಬುದನ್ನು ಅರಿತು ಮಾತನಾಡಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಸಾಧನೆಗಳನ್ನು ತಿಳಿಸುವ ಕೆಲಸಕ್ಕೆ ಮುಂದಾಗಬೇಕು ಎಂದ ಕರೆ ನೀಡಿದ ಅವರು, ಪ್ರತಿ ಕ್ಷೇತ್ರದಲ್ಲೂ ಕಾಂಗ್ರೆಸ್ ಕಟ್ಟುವ ಕೆಲಸ ಮಾಡಬೇಕು ಎಂದರು.
ತುಮಕೂರಿನಿಂದ ಜನಜಾಗೃತಿ ಅಭಿಯಾನವನ್ನು ಆರಂಭಿಸಿರುವುದು ಶುಭ ಸೂಚನೆ. ಈ ಹಿಂದೆಯೂ ಪಾಂಚಜನ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಇಲ್ಲಿಂದಲೇ ಆರಂಭಿಸಲಾಗಿತ್ತು. ಆ ಸಂದರ್ಭದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಈಗಲೂ ಅದೇ ರೀತಿ ೨೦೨೩ಕ್ಕೆ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರಾದ ವೆಂಕಟಮರಮಣಪ್ಪ, ಡಾ. ರಂಗನಾಥ್, ಷಡಕ್ಷರಿ, ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ, ಡಾ. ರಫೀಕ್‌ಅಹಮದ್, ಎಸ್. ಷಫಿಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಮುರುಳೀಧರ ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.