ಬಿಜೆಪಿ ಮಾತು, ಭೂತದ ಬಾಯಲ್ಲಿ ಭಗವದ್ಗೀತೆ ಜೆಡಿಎಸ್ ಕಿಡಿ

ಬೆಂಗಳೂರು,ನ.೧೩- ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸದ ರಾಜ್ಯಸರ್ಕಾರ ಶಿಷ್ಟಾಚಾರ ಲೋಪವೆಸಗಿದ ಗ್ಗೆ ಮುಖ್ಯಮಂತ್ರಿಗಳು ಉತ್ತರಿಸಬೇಕೇ ಹೊರತು, ಬಿಜೆಪಿ ಅಲ್ಲ, ಇಷ್ಟಕ್ಕು ಇದು ಕೇಶವ ಕೃಪಾದ ಕಾರ್ಯಕ್ರಮವಲ್ಲ ಎಂದು ಜೆಡಿಎಸ್ ಹೇಳಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೆ ಮಹಾಪರಾಧ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ ಎಂದು ಟ್ವಿಟರ್‌ನಲ್ಲಿ ಹೇಳಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಸ್ಥಿತ್ವದ ಭಯ ಎನ್ನುವ ನಿಮ್ಮ ಟೀಕೆ ಪಕ್ಕಕ್ಕಿಡಿ, ಪ್ರಧಾನಿ ಮೋದಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ, ಇನ್ನೂ ೬ ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡೊ ಬರುತ್ತಾರೋ ನೋಡೋಣ, ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು ಎನ್ನುವುದು ಗೊತ್ತಾಗುತ್ತದೆ ಎಂದು ಜೆಡಿಎಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.
ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎಂಬ ಬಿಜೆಪಿ ಮಾತು ಭೂತನ ಬಾಯಲ್ಲಿ ಭಗವದ್ಗೀತೆ ಎಂಬಂತಾಗಿದೆ. ಧರ್ಮ, ಜಾತಿ, ಆಚಾರ-ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ ಎಂದು ಜೆಡಿಎಸ್ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಹ್ವಾನ ನೀಡಿದ್ದರೂ ಎಂಬ ಹಸಿ ಸುಳ್ಳನ್ನೇ ಬಿಜೆಪಿ ಹೇಳುತ್ತಿರುವುದು ಬಿಜೆಪಿ ಗೊಬೆಲ್ ಸಂತತಿಯ ಶಿಶು ಎನ್ನುವುದಕ್ಕೆ ಸಾಕ್ಷಿ. ಸುಳ್ ಬಿಜೆಪಿಗೆ ಸತ್ಯವೆಂದರೆ ಅಪತ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ ಸಿಎಂ ಎಂದೇ ಪ್ರಖ್ಯಾತಿಯಾಗುತ್ತಿರುವುದು ವಿಪರ್ಯಾಸ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.