ಬಿಜೆಪಿ ವಿರುದ್ಧ ರಾಮಲಿಂಗಾರೆಡ್ಡಿ ವಾಗ್ದಾಳಿ

R Ramalinga Reddy

ಬೆಂಗಳೂರು, ಜ. ೩- ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಕರ್ತರು ತೊಡಬೇಕು ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿಂದು ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸಂಕಲ್ಪ-೨೦೨೧ ಜನಪರ ಹೋರಾಟ ಮತ್ತು ಪಕ್ಷ ಸಂಘಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿಂದು ಅರಾಜಕತೆ ಇದೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದರು.
ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ವಿರೋಧ ಪಕ್ಷಗಳನ್ನು ಮುಗಿಸುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ನಡೆಸಿದೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಬಲಯುತವಾಗಿರಬೇಕು. ಆದರೆ ಬಿಜೆಪಿಗೆ ವಿರೋಧ ಪಕ್ಷಗಳೇ ಬೇಕಾಗಿಲ್ಲ. ಪಕ್ಷಾಂತರ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಎಲ್ಲ ರಾಜ್ಯಗಳಲ್ಲೂ ವಿರೋಧ ಪಕ್ಷದ ಶಾಸಕರನ್ನು ಬಿಜೆಪಿಗೆ ಸೆಳೆಯಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಚಾರ ಎಂದರು.
ದೇಶದಲ್ಲಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಈ ಹಿಂದೆ ಭ್ರಷ್ಟಾಚಾರ ಇರಲಿಲ್ಲ ಎಂದಲ್ಲ. ಆದರೆ ಒಂದು ಮಿತಿಯಲ್ಲಿತ್ತು. ಭ್ರಷ್ಟಾಚಾರವನ್ನು ನಿಗ್ರಹಿಸಲಾಗಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಮಿತಿ ಮೀರಿದೆ ಎಂದರು.
ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಧಾನಿ ಮೋದಿಯವರು ಸಿದ್ದರಾಮಯ್ಯ ಸರ್ಕಾರ ೧೦ ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕಿಸಿದ್ದರು. ಈಗಿನ ಬಿಜೆಪಿ ಸರ್ಕಾರ ೩೦ ಪರ್ಸೆಂಟ್ ಕಮೀಷನ್ ಸರ್ಕಾರವಾಗಿದೆ. ಈ ಬಗ್ಗೆ ಮೋದಿ ಏಕೆ ಮಾತನಾಡುತ್ತಿಲ್ಲ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷ ಸರ್ವ ಜನರನ್ನು, ಸರ್ವ ಜನಾಂಗವನ್ನು, ಸರ್ವ ಧರ್ಮೀಯರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಕಲ್ಪ ತೊಡೋಣ ಎಂದು ಅವರು ಇದೇ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದರು.
ಮುಂದಿನ ಬಿಬಿಎಂಪಿ ಚುನಾವಣೆಗೂ ಪಕ್ಷ ಸಜ್ಜಾಗಬೇಕಿದೆ. ಬಿಜೆಪಿ ಆಡಳಿತದಲ್ಲಿ ನಡೆದ ದುರಾಡಳಿತವನ್ನು ಜನರ ಮುಂದಿಟ್ಟು ಬಿಬಿಎಂಪಿಯಲ್ಲಿ ಕಾಂಗ್ರೆಸ್‌ನ ಅಧಿಕಾರವನ್ನು ಮರು ಸ್ಥಾಪಿಸೋಣ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಮ್ ಅಹಮದ್, ಮಾಜಿ ಮೇಯರ್ ರಾಮಚಂದ್ರಪ್ಪ, ಮುಖಂಡರಾದ ಎಸ್. ಮನೋಹರ್, ಸಲೀಂ, ಜಿ. ಜನಾರ್ಧನ್ ಮತ್ತಿತರರು ಉಪಸ್ಥಿತರಿದ್ದರು.