ಬಿಜೆಪಿ ಸರ್ಕಾರದಿಂದ ರಾಜ್ಯ ಲೂಟಿ : ಪ್ರಿಯಾಂಕ ಗಾಂಧಿ ವಾದ್ಗಾಳಿ

ಬೆಂಗಳೂರು/ ಬೆಳಗಾವಿ,ಏ.30- ರಾಜ್ಯ ಬಿಜೆಪಿ ಸರ್ಕಾರ ಎಲ್ಲ ಹಂತದಲ್ಲಿ ರಾಜ್ಯವನ್ನು ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಇಂದಿಲ್ಲಿ ನೇರ ವಾಗ್ದಾಳಿ ನಡೆಸಿದ್ದಾರೆ.

ಜನರು ಆರಿಸಿದ ಸರ್ಕಾರವನ್ನು ಶಾಸಕರ ಖರೀದಿ ಮೂಲಕ ಬೀಳಿಸಿ ಸರ್ಕಾರ ರಚಿಸಿದ್ದಾರೆ. ಇಂತಹ ಸರ್ಕಾರದ ನಿಯತ್ತು ಆರಂಭದಲ್ಲೇ ಹಾಳಾಗಿತ್ತು. ಇದರಿಂದ ಆಡಳಿತ ಕುಸಿಯಿತು. ಇಬ್ಬರು ಮುಖ್ಯಮಂತ್ರಿಗಳು ಬಂದರು. ಪರಿಣಾಮ ಅಭಿವೃದ್ಧಿ ಸ್ಥಗಿತವಾಗಿತ್ತು ಎಂದು ಹೇಳಿದ್ದಾರೆ.

ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಈ ಸರ್ಕಾರ ಶೇ 40ರಷ್ಟು ಕಮಿಷನ್ ಸರ್ಕಾರ ಎಂದು ದೇಶಾದ್ಯಂತ ಕುಖ್ಯಾತಿ ಪಡೆದಿದೆ ಎಂದು ದೂರಿದ್ದಾರೆ‌

ದೇಶದಲ್ಲಿ ಬೆಲೆ ಏರಿಕೆ ಎಗ್ಗಿಲ್ಲದೆ ಸಾಗಿದೆ. ಅಡುಗೆ ಸಿಲಿಂಡರ್ 1100 ಆಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜಿಎಸ್ ಟಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಸಂಸಾರ ನಿಭಾಯಿಸುವುದು ಬಹಳ ಕಷ್ಟವಾಗಿದೆ. ಇದರಿಂದ ಮಹಿಳೆಯರು ಬಹಳ ಸಂಕಷ್ಟವಾಗಲಿದೆ ಎಂದರು

ರೈತರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ. ಕೃಷಿಯ ಪ್ರತಿ ಸಲಕರಣೆ ಮೇಲೆ ಜಿಎಸ್ ಟಿ ವಿಧಿಸಲಾಗಿದೆ. ಇದರ ಮಧ್ಯೆ ರೈತ ಶ್ರಮವಹಿಸಿದರೂ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ದೂರಿದರು.

ಯುವಕರಿಗೆ ಸರ್ಕಾರ ಉದ್ಯೋಗ ನೀಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ಆದರೂ ಯಾವುದನ್ನು ಸರ್ಕಾರ ತುಂಬಿಲ್ಲ. ಎಲ್ಲಾ ನೇಮಕಾತಿಯಲ್ಲಿ ಅಕ್ರಮ ಮಾಡಿ ಯುವಕರ ಭವಿಷ್ಯ ನಾಶ ಮಾಡಲಾಗಿದೆ. ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸರ್ಕಾರ ಎಲ್ಲ ಹಂತದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ನೇಮಕಾತಿ, ಕೋವಿಡ್, ಗುತ್ತಿಗೆಯಲ್ಲಿ, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಹಗರಣ ಮಾಡಿದ್ದಾರೆ. ಭ್ರಷ್ಟಾಚಾರದಿಂದ ಗುತ್ತಿಗೆದಾರರು ಸತ್ತರೂ ಪ್ರಧಾನಮಂತ್ರಿಗಳಿಂದ ಉತ್ತರ ಇಲ್ಲ ಎಂದರು.

ಈ ಭ್ರಷ್ಟ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಆಡಳಿತ ಮಾಡಿದರೆ ನಿಮ್ಮ ಭವಿಷ್ಯದ ಗತಿ ಏನು? ಎಲ್ಲದಕ್ಕೂ ಲಂಚ ನೀಡುವುದಾದರೆ ಪರಿಶ್ರಮಕ್ಕೆ ಬೆಲೆ ಏನು ರೈತ ಲಂಚ ನೀಡಲಾಗಿದೆ ತನ್ನ ಎತ್ತುಗಳನ್ನು ನೀಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸರ್ಕಾರ ಬೇಕೇ ಬದಲಾವಣೆ ಬೇಕೇ ಎಂದು ನೀವೇ ಆಲೋಚಿಸಬೇಕು ಎಂದು ಹೇಳಿದರು.

ಬಿಜೆಪಿ ಸರ್ಕಾರ 1.50 ಲಕ್ಷ ಕೋಟಿ ಲೂಟಿ ಮಾಡಿದೆ. ಇದು ಭ್ರಷ್ಟಾ ಹಾಗೂ ಸುಳ್ಳಿನ ಸರ್ಕಾರ. ಈ ಹಣದಲ್ಲಿ ನೂರಾರು ಏಮ್ಸ್, ಸಾವಿರಾರು ಎಕ್ಸ್ ಪ್ರೆಸ್ ವೇ, 186 ಇಎಸ್ ಐ, 30 ಸಾವಿರ ಸ್ಮಾರ್ಟ್ ತರಗತಿ ನಿರ್ಮಾಣ, 30 ಲಕ್ಷ ಮನೆಗಳು ಮಾಡಬಹುದಿತ್ತು ಎಂದರು.

ಈ ಸರ್ಕಾರ ಮೀಸಲಾತಿ ವಿಚಾರವಾಗಿ ನಾಲ್ಕು ವರ್ಷ ಏನೂ ಮಾಡಲಿಲ್ಲ. ಚುನಾವಣೆ ಹತ್ತಿರ ಬಂದಾಗ ಮೀಸಲಾತಿ ಹೆಚ್ಚಳ ಎಂದು ಹೇಳಿ, ಸುಪ್ರೀಂ ಕೋರ್ಟ್ ನಲ್ಲಿ ಇದು ಜಾರಿ ಮಾಡುವುದಿಲ್ಲ ಎಂದರು. ಕಾಂಗ್ರೆಸ್ ಪಕ್ಷ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿತ್ತು.

ಬಿಜೆಪಿ ಎಂದು ಕೊಟ್ಟ ಮಾತಿಗೆ ತಕ್ಕಂತೆ ನಡೆಯುವುದಿಲ್ಲ. ಕಾಂಗ್ರೆಸ್ ಕೊಟ್ಟ ಭರವಸೆ ಈಡೆರಿಸಿವೆ. ರಾಜಸ್ಥಾನದಲ್ಲಿ ರೈತರ ಸಾಲ ಮನ್ನಾ, ಹಿಮಾಚಲ ಪ್ರದೇಶದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದ್ದೇವೆ ಎಂದರು

ಕಾಂಗ್ರೆಸ್ ಸರ್ಕಾರ ಇದ್ದಾಗ ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರ ಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ ಯೋಜನೆ ನೀಡಿತ್ತು. ಕಾಂಗ್ರೆಸ್ ಮುಂದೆ ಸರ್ಕಾರ ರಚಿಸಿದರೆ ಜನರಿಗಾಗಿ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ ಎಂದು ಹೇಳಿದರು.