ಬಿಟ್ ಕಾಯಿನ್ ಕೈ ನಾಯಕರೇ ಶಾಮೀಲು: ವಿಜಿ ತಿರುಗೇಟು

ದಾವಣಗೆರೆ,ನ.೧೧- ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಆಧಾರರಹಿತ ಆರೋಪ ಮಾಡುತ್ತಿದೆ, ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರೇ ಬಿಟ್ ಕಾಯಿನ್ ಹಗರಣದಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ವಿಚಿತ್ರ ಎಂದರೆ ಕಾಂಗ್ರೆಸ್ ಮುಖಂಡರೇ ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದರು.
ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಪ್ರಭಾವಿ ನಾಯಕರು ಭಾಗಿಯಾಗಿದ್ದರೂ ತನಿಖೆ ನಡೆಸುತ್ತೇವೆ. ಯಾವುದೇ ರಾಜೀ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ನಿನ್ನೆಯೇ ಸ್ಪಷ್ಟವಾಗಿ ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್‌ನವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಚುನಾವಣೆವರೆಗೂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಇಲ್ಲ, ಆದರೂ ಕಾಂಗ್ರೆಸ್‌ನ ಕೆಲ ನಾಯಕರು ಸಿಎಂ ಬದಲಾವಣೆ ವಿಚಾರ ಮಾತನಾಡುವ ಮೂಲಕ ಕುತಂತ್ರ ನಡೆಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿಕಾರಿದರು.