ಬಿಟ್ ಕಾಯಿನ್ ಯಾರ ರಕ್ಷಣೆ ಇಲ್ಲ


ಹುಬ್ಬಳ್ಳಿ, ನ. ೧೮: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಗೂ ರಕ್ಷಣೆ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿಲ್ಲ. ಯಾರಿಗೂ ರಕ್ಷಣೆ ನೀಡುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಯನ್ನು ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ ಎಂದವರು ತಿಳಿಸಿದರು.
ರಾಜ್ಯದಲ್ಲಿ ಜನಸ್ವರಾಜ್ ಯಾತ್ರೆ ಹಿನ್ನೆಲೆಯಲ್ಲಿ ೮ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದ್ದು, ನನ್ನೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಸಚಿವ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯದ ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಬಹುಮತ ಸಾಧಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದವರು ನುಡಿದರು.
ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದರು.
ರಾಜ್ಯದಲ್ಲಿ ಉಂಟಾಗಿರುವ ಅಕಾಲಿಕ ಮಳೆಯಿಂದ ಆದಂತಹ ಹಾನಿಗೆ ಮುಖ್ಯಮಂತ್ರಿಗಳು ಸರ್ವೆ ಮಾಡಿಸುತ್ತಿದ್ದಾರೆ ಎಂದು ತಿಳಿಸಿದರು.