ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕಠಿಣ ಕ್ರಮ: ಸಚಿವ ಪಾಟೀಲ

ಧಾರವಾಡ,ಜೂ8: ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ರಾಜ್ಯದಲ್ಲಿ 153 ಲಕ್ಷ ಟನ್ ಆಹಾರ ಉತ್ಪಾದೆಯಾಗಿದೆ. ಪ್ರಸಕ್ತ ವರ್ಷವು ಉತ್ತಮ ಮಳೆಯಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಬಿತ್ತನೆ ಬೀಜ, ರಸಗೊಬ್ಬರಗಳನ್ನು ದಾಸ್ತಾನು ಮಾಡಲಾಗಿದೆ. ಯಾವುದೇ ಮಾರಾಟಗಾರರು ಬಿತ್ತನೆ ಬೀಜ, ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸಿದರೆ ಹಾಗೂ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಿ ತಕ್ಷಣ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಆದೇಶಿಸಿದರು.
ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ.99 ರಷ್ಟು ಹೆಚ್ಚುವರಿ ಮಳೆಯಾಗಿದೆ. ಜಿಲ್ಲೆಯಲ್ಲಿ 15,428 ಕ್ವಿಂಟಲ್ ವಿವಿಧ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ಈಗಾಗಲೇ 20,268 ಕ್ವಿಂಟಲ್ ಬೀಜಗಳ ಲಭ್ಯತೆ ಇದ್ದು ಮತ್ತು 16781 ಕ್ವಿಂಟಲ್ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ ಎಂದರು.
ಅದೆ ರೀತಿ ದಾರವಾಡ ಜಿಲ್ಲೆಯ 72 ಬೀಜ ಮಳಿಗೆ, 54 ರಸಗೊಬ್ಬರ ಮಳಿಗೆ ಮತ್ತ 41 ಪೀಡನಾಶಕ ಮಳಿಗೆಗಳನ್ನು ಅಧಿಕಾರಿಗಳು ತಪಾಸಣೆ ಮಾಡಿ, ಒಂದು ಬೀಜ ಮಳಿಗೆ, ಆರು ರಸಗೊಬ್ಬರ ಮಳಿಗೆಗಳಿಗೆ ಶೋಕಾಸ್ ನೋಟೀಸ್ ನೀಡಿದ್ದಾರೆ. ಮತ್ತು ಒಂದು ಬೀಜ ಮಳಿಗೆ ಮತ್ತು ಒಂದು ರಸಗೊಬ್ಬರ ಮಳಿಗೆಯನ್ನು ಜಪ್ತಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.
ಪ್ರಧಾನ ಮಂತ್ರಿಗಳ ಘೋಷಣೆ ‘ಕ್ಯಾಚ್ ದ ರೆನ್ ವೇರ್ ಇಟ್ ಫಾಲ್ಸ್’ (ಅಚಿಣh ಣhe ಡಿಚಿiಟಿ ತಿheಡಿe iಣ ಜಿಚಿಟಟs) ಅಡಿಯಲ್ಲಿ ಕಳೆದ ವರ್ಷ ರಾಜ್ಯದಲ್ಲಿ ಉದ್ಯೋಗ ಖಾತ್ರಿಯೋಜನೆಯಲ್ಲಿ 1 ಕೋಟಿ 17 ಲಕ್ಷ ಮಾನವ ದಿನಗಳನ್ನು ಸೃಜಿಸಿ, ರೂ.335 ಕೋಟಿ ವೆಚ್ಚ ಭರಿಸಿ, 60,500 ಹೆಕ್ಟೇರ್ ಬದು ನಿರ್ಮಾಣ ಹಾಗೂ 15,504 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಮತ್ತು ಧಾರವಾಡ ಜಿಲ್ಲೆಯಲ್ಲಿ 281 ಹೆಕ್ಟೆರ ಭೂಮಿಯಲ್ಲಿ ಬದು ನಿರ್ಮಾಣ ಹಾಗೂ 48 ಹೆಕ್ಟೇರ್‍ದಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದರು.
ಲಾಕ್‍ಡೌನ್ ಅವಧಿಯಲ್ಲಿಯೂ ಕೃಷಿಗೆ ಯಾವುದೆ ತೊಂದರೆಯಾಗದಂತೆ ಕ್ರಮವಹಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಧಾರವಾಡ ಜಿಲ್ಲಾಧಿಕಾರಿಗಳು ಕೃಷಿ ಪರಿಕರಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಿದ್ದು, ಎಲ್ಲ ಖಾಸಗಿ ಮಾರಾಟಗಾರರಿಗೆ ಕಡ್ಡಾಯವಾಗಿ ಈ ಅವಧಿಯಲ್ಲಿ ಮಾರಾಟ ಮಳಿಗೆ ತೆರೆದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಕ್ರಮವಹಿಸಬೇಕು. ನಿಯಮ ಪಾಲಿಸದಿದ್ದಲ್ಲಿ ಅಂತಹ ಮಳಿಗೆಗಳಿಗೆ ಶೋಕಾಸ್ ನೋಟೀಸ್ ನೀಡಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ.ನಿಂಬಣ್ಣವರ, ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶಿಲಾ.ಬಿ., ಪ್ರೋಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಬಿ.ಚಟ್ಟಿ, ಕೃಷಿ ನಿರ್ದೇಶನಾಲಯದ ಸಾವಯವ ವಿಭಾಗದ ಅಪರ ನಿರ್ದೇಶಕ ಜೆ.ವೆಂಕಟರಾಮರೆಡ್ಡಿ ಪಾಟೀಲ ಸೇರಿದಂತೆ ಇತರರು ಇದ್ದರು.
ಜಂಟಿ ಕೃಷಿ ನಿರ್ದೇಶಕ ರಾಜಶೇಖರ .ಐ. ಬಿಜಾಪೂರ ಸ್ವಾಗತಿಸಿ, ಜಿಲ್ಲೆಯ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಕುರಿತು ಸಭೆಗೆ ವಿವರಿಸಿದರು. ಸಭೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಕೆಯ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.