ಬಿಸಿಯೂಟ ಸೇವನೆಯಿಂದ ಮಕ್ಕಳ ಅಸ್ವಸ್ಥ:ಮಕ್ಕಳ ಆರೋಗ್ಯ ವಿಚಾರಿಸಿದ ಜಿಲ್ಲಾ ಪಂಚಾಯತ್ ಸಿ.ಇ.ಓ

ಕಲಬುರಗಿ,ಜು.28: ಬುಧವಾರ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವನೆಯಿಂದ ಅಸ್ವಸ್ಥಗೊಂಡು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಾದ 6 ಮಕ್ಕಳನ್ನು ಬುಧವಾರ ತಡರಾತ್ರಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸ್ಥಳದಲ್ಲಿದ್ದ ಆಸ್ಪತ್ರೆಯ ವೈಧ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಈ ಪ್ರಕರಣದಲ್ಲಿ ಎಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂಬುದರ ಕುರಿತು ಒಂದು ದಿನದಲ್ಲಿ ವರದಿ ನೀಡಲು ಡಿ.ಡಿ.ಪಿ.ಐ, ಬಿ.ಇ.ಓ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅರುಣಕುಮಾರ ಪಾಟೀಲ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿದ್ದರು.