ಬಿಹಾರದಲ್ಲಿ ಪ್ರಜಾಪ್ರಭುತ್ವದ ಕೊಲೆ-ಕಾಂಗ್ರೆಸ್ ಕಿಡಿ


ನವದೆಹಲಿ.ಮಾ೨೪:ಬಿಹಾರ ವಿಧಾನಸಭೆಯಲ್ಲಿ ಮಂಗಳವಾರ ವಿರೋಧ ಪಕ್ಷದ ಸದಸ್ಯರ ಮೇಲೆ ಪೊಲೀಸರು ದೌರ್ಜನ್ಯ ಎಸಗುವ ಮೂಲಕ, ಆ ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗಿದೆ’ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.
ಬಿಹಾರ ವಿಧಾನಸಭೆಯಲ್ಲಿ ಮಂಗಳವಾರ ’ಬಿಹಾರ ಸಶಸ್ತ್ರ ಪೊಲೀಸ್ ಮಸೂದೆ- ೨೦೨೧’ ಅಂಗೀಕಾರಕ್ಕೆ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನೊಳಗೊಂಡ ಮಹಾ ಮೈತ್ರಿಯ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸಭಾಧ್ಯಕ್ಷರ ಕೊಠಡಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಶಾಸಕರನ್ನು ಹೊರಗೆ ಕಳುಹಿಸಲು ಪೊಲೀಸರನ್ನು ಕರೆಸಲಾಯಿತು. ಈ ವೇಳೆ ಹಿಂದೆಂದೂ ಕಾಣದಂತಹ ಪ್ರಕ್ಷುಬ್ಧತೆಗೆ ವಿಧಾನಸಭೆ ಸಾಕ್ಷಿಯಾಯಿತು.
ಇದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ’ಬಿಹಾರ ವಿಧಾನಸಭೆಯಲ್ಲಿ ನಡೆದ ಇಂಥ ನಾಚಿಕೆಗೇಡಿನ ಘಟನೆಗಳನ್ನು ಗಮನಿಸಿದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಲೇ ಇರುತ್ತಾರೆ. ಯಾವುದಕ್ಕೂ ಹೆದರುವುದಿಲ್ಲ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ನ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ. ’ಬಿಹಾರ ವಿಧಾನಸಭೆಯಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಶಾಸಕರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದರ ವಿರುದ್ಧ ಜನರು ಧ್ವನಿ ಎತ್ತಬೇಕು’ ಎಂದು ಒತ್ತಾಯಿಸಿದ್ದಾರೆ.