ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳು ಬರಪೀಡಿತ ಎಂದು ಘೋಷಿಸಬೇಕು: ಈಶ್ವರಸಿಂಗ್ ಠಾಕೂರ

ಬೀದರ್:ಸೆ.20: ಪ್ರಸಕ್ತ ಸಾಲಿನ ಮುಂಗಾರು ವಿಫಲಗೊಂಡ ಹಿನ್ನೆಲೆ, ರಾಜ್ಯದ 161 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಇದರಲ್ಲಿ ಬೀದರ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ ಮತ್ತು ಹುಲಸೂರು ತಾಲೂಕಾಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬೀದರ, ಹುಮನಾಬಾದ, ಔರಾದ, ಚಿಟಗುಪ್ಪಾ ತಾಲೂಕುಗಳನ್ನು ರಾಜ್ಯ ಸರ್ಕಾರದಿಂದ ನಿರ್ಲಕ್ಷಿಸಿ ಈ ತಾಲೂಕುಗಳ ರೈತರಿಗೆ ಅನ್ಯಾಯ ಮಾಡಲಾಗಿದೆ.

ಕೂಡಲೇ ರಾಜ್ಯ ಸರ್ಕಾರದಿಂದ ಮಾಡಲಾದ ಅನ್ಯಾಯವನ್ನು ಸರಿಪಡಿಸಿ ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಬರಪೀಡಿತ ಎಂದು ಘೋಷಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ಕಲಬುರಗಿ ವಿಭಾಗೀಯ ಸಂಘಟನಾ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಈಶ್ವರಸಿಂಗ್ ಠಾಕೂರ ಅವರು ತಮ್ಮ ಮನವಿಯಲ್ಲಿ ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯ ಕೊರತೆಯಿಂದ ಮುಂಗಾರು ವಿಫಲಗೊಂಡಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಮಳೆಯ ಕೊರತೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರ ನೆರವಿಗೆ ಬಂದು ಸಂಪೂರ್ಣ ಬೀದರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.